ಹಾಸನ ಗಣೇಶ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್; 8 ಮಂದಿ ದಾರುಣ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Published : Sep 12, 2025, 09:49 PM ISTUpdated : Sep 12, 2025, 10:58 PM IST
Hassan Accident

ಸಾರಾಂಶ

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಕ್ಯಾಂಟರ್ ಟ್ರಕ್ ನುಗ್ಗಿ ಭೀಕರ ದುರಂತ ಸಂಭವಿಸಿದೆ. 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಹಾಸನ (ಸೆ.12): ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೊಸಳೆ ಹೊಸಹಳ್ಳಿಯನ್ನು ನಡೆಯುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಕ್ಯಾಂಟರ್ ಟ್ರಕ್ ನುಗ್ಗಿದ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಮತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇಪ್ಪತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಹಾಸನ ನಗರದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

ಘಟನೆ ವಿವರ:

ಸಂಭ್ರಮದಿಂದ ಗಣೇಶ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹಾಸನದಿಂದ ಹೊಳೆನರಸೀಪುರ ಕಡೆಗೆ ವೇಗವಾಗಿ ಹೋಗುತ್ತಿದ್ದ ಟ್ರಕ್, ಮಾರ್ಗ ಮಧ್ಯದಲ್ಲಿ ಏಕಾಏಕಿ ರಸ್ತೆಗೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಮೆರವಣಿಗೆಯಲ್ಲಿದ್ದ ಜನರ ಮೇಲೆ ನುಗ್ಗಿದೆ.

8 ಸಾವು, 20ಕ್ಕೂ ಅಧಿಕ ಜನರಿಗೆ ಗಾಯ:

ಘಟನೆಯ ತೀವ್ರತೆಗೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡ 20ಕ್ಕೂ ಹೆಚ್ಚು ಜನರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ತಕ್ಷಣವೇ ಪೊಲೀಸರು ಮತ್ತು ಆಂಬ್ಯುಲೆನ್ಸ್ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ದುರ್ಘಟನೆಯು ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

 

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯರು, ಮೆರವಣಿಗೆಗಳು ಸಾಗುವಾಗ ವಾಹನ ಸಂಚಾರಕ್ಕೆ ಸೂಕ್ತ ನಿರ್ಬಂಧಗಳನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಒಟ್ಟಾರೆ, ಹಬ್ಬದ ಸಂಭ್ರಮವು ಕ್ಷಣಾರ್ಧದಲ್ಲಿ ದುಃಖಕ್ಕೆ ತಿರುಗಿದ್ದು, ಈ ದುರಂತವು ಇಡೀ ಜಿಲ್ಲೆಯಲ್ಲಿ ಆಘಾತ ಮೂಡಿಸಿದೆ.

ಪೊಲೀಸರ ನಿರ್ಲಕ್ಷ್ಯದಿಂದಲೇ ದುರಂತ:

ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಅವರು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಮುತುವರ್ಜಿವಹಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಸಂಪೂರ್ಣ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಗಣೇಶ ಮೆರವಣಿಗೆ ನಡೆಯುವ ಸ್ಥಳದಲ್ಲಿ ದೂರದಲ್ಲಿ ಬ್ಯಾರಿಕೇಡ್ ಹಾಕಿ ರಕ್ಷಣೆ ನೀಡಬೇಕು. ಗಣೇಶ ಮೆರವಣಿಗೆ ವೇಳೆ ಪೊಲೀಸರೇ ಇರಲಿಲ್ಲ ಎಂದು ಹೇಳುತ್ತಿದ್ದಾರೆ. ಒಟ್ಟು 25 ಜನರಿಗೆ ಇದೀಗ ಗಾಯವಾಗಿದೆ. ಇದನ್ನು ಪೊಲೀಸ್ ವರಿಷ್ಠಾಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಈ ಅಪಘಾತವು ಪೊಲೀಸ್ ಇಲಾಖೆ ವೈಫಲ್ಯದಿಂದ ನಡೆದಿದೆ ಎಂದು ಆರೋಪಿಸಿದರು.

ಸರ್ಕಾರದಿಂದ ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರಕ್ಕೆ ಆಗ್ರಹ

ಇನ್ನು ಈ ಘಟನೆ ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. , ಸರ್ಕಾರ ಗಂಭೀರವಾಗಿ ಪರಿಗಣಿಸಿ ಮೃತರ ಸಂತ್ರಸ್ತ ಕುಟುಂಬಳಿಗೆ ಕನಿಷ್ಠ ₹10 ಲಕ್ಷ ರೂ. ಗಳಿಂದ ₹15 ಲಕ್ಷ ಪಹಾರ ಕೊಡಬೇಕು. ಲಾರಿ ಚಾಲಕ ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದು, ಆತನ ಯಡವಟ್ಟಿನಿಂದಲೇ ಈ ಅಪಘಾತ ಸಂಭವಿಸಿ ಅಮಾಯಕರ ಪ್ರಾಣ ಹೋಗಿದೆ. ಲಾರಿ ಚಾಲಕ ಮತ್ತು ಮಾಲೀಕನ ಮೇಲೆ ಕಠಿಣ ಕ್ರಮ ಜರುಗಿಸಬೇಕು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ರೇವಣ್ಣ ಆಗ್ರಹಿಸಿದರು.

PREV
Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್