ಹಾವೇರಿಯಲ್ಲಿ ನಡೆಯಬೇಕಿದ್ದ ನುಡಿಜಾತ್ರೆ ಮುಂದಕ್ಕೆ/ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ/ ಕೊರೋನಾ ನಿಯಮಾವಳಿ ಕಾರಣ ಸಮ್ಮೇಳನ ನಡೆಸಲು ಸಾಧ್ಯವಿಲ್ಲ/ ಆರೋಗ್ಯ ಇಲಾಖೆ ಅಧಿಕಾರಿಗಳ ವರದಿ ಪಡೆದು ಏಪ್ರಿಲ್ ತಿಂಗಳಲ್ಲಿ ಸಮ್ಮೇಳನ
ಬೆಂಗಳೂರು(ಫೆ. 05) ಹಾವೇರಿಯಲ್ಲಿ ನಿಗದಿಯಾಗಿದ್ದ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಬೆಂಗಳೂರಿನಲ್ಲಿ ಕನ್ನಡ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲೆಯ ಶಾಸಕರು, ಕಸಾಪ ಪದಾಧಿಕಾರಿಗಳು ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಫೆ. 26 ರಿಂದ ಮೂರು ದಿನ ಸಮ್ಮೇಳನ ನಡೆಯಬೇಕಿತ್ತು. ಆದರೆ ಸಮ್ಮೇಳನ ನಡೆಸುವುದು ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗಲಿದೆ. ಅದಕ್ಕಾಗಿ ಮಾರ್ಚ್ ನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ವರದಿ ಪಡೆದು ಏಪ್ರಿಲ್ ತಿಂಗಳಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸೋಣ ಎಂಬ ತೀರ್ಮಾನಕ್ಕೆ ಬರಲಾಗಿದೆ .
ಸಮ್ಮೇಳನ ಅಧ್ಯಕ್ಷರಾಗಿ ಕವಿ ದೊಡ್ಡರಂಗೇಗೌಡ
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು. ಸಭೆಯಲ್ಲಿ ಫೆಬ್ರವರಿ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳವನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಲಾಯಿತು ಎಂದು ಸಚಿವ ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ, ತೋಟಗಾರಿಕೆ ಸಚಿವ ಆರ್. ಶಂಕರ, ಶಾಸಕ ನೆಹರು ಓಲೇಕಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮನು ಬಳಿಗಾರ ಹಾಗೂ ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.