ಈ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಲವೆಡೆ ವರುಣ ಅಬ್ಬರಿಸಲಿದ್ದಾರೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ.
ಬೆಂಗಳೂರು [ಸೆ.23]: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಂಕಾಗಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಈಗಾಗಲೇ ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕೆ.ಆರ್.ನಗರ, ಮೈಸೂರು ಸೇರಿದಂತೆ ಹಲವೆಡೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕ್ರಮೇಣ ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಿಗೂ ಮಳೆ ವ್ಯಾಪಿಸುತ್ತಿದೆ. ಈ ವಾರದಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಉತ್ತರ, ದಕ್ಷಿಣಕ್ಕೆ ಆರೆಂಜ್ ಅಲರ್ಟ್: ಸೆ.24ರ ಮಂಗಳವಾರ ಉತ್ತರ ಒಳನಾಡಿನ ಕಲಬುರಗಿ, ದಕ್ಷಿಣ ಒಳನಾಡಿನ ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 115 ಮಿ.ಮೀ.ನಿಂದ 204 ಮಿ.ಮೀ.ವರೆಗೆ ಭಾರೀ ಮಳೆಯಾಗುವ ಲಕ್ಷಣ ಇರುವುದರಿಂದ ಈ ನಾಲ್ಕು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಉಳಿದಂತೆ ಬೀದರ್, ಧಾರವಾಡ, ಗದಗ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ 65ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ‘ಯಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.