ಮುಂದಿನ ಮೂರು ನಾಲ್ಕು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು [ಸೆ.08]: ಮುಂದಿನ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮಹಾರಾಷ್ಟ್ರದಿಂದ ಕೇರಳದ ನಡುವೆ ಗಾಳಿಯ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
10 ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’: ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ.12 ವರೆಗೆ 65 ಮಿ.ಮೀ.ನಿಂದ 115 ಮಿ.ಮೀ. ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯಲ್ಲೋ ಅಲರ್ಟ್’ ನೀಡಲಾಗಿದೆ. ಇನ್ನು ಮಲೆನಾಡು ಭಾಗದ ನಾಲ್ಕು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೂರು ದಿನ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯಲ್ಲೋ ಅಲರ್ಟ್ ನೀಡಲಾಗಿದೆ.
ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ 65 ರಿಂದ 115 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.