
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಣೆ ಮತ್ತು ಇತರೆ ಸರಕು ಸಾಗಾಣಿಕೆ ನಿರ್ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆ ಪರಿಸ್ಥಿತಿ ಹದಗೆಡುತ್ತದೆ ಅಲ್ಲದೆ ಅಧಿಕ ಭಾರ ತುಂಬಿದ ಭಾರಿ ಸರಕು ಸಾಗಾಟದ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿ ಮಣ್ಣು ಕುಸಿತದಿಂದಾಗಿ ರಸ್ತೆ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿದೆ.
ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಜೂ.10ರಿಂದ ಜು. 9ರವರೆಗೆ ವಾಹನ ಸಂಚಾರ ವ್ಯವಸ್ಥೆ ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ.
ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಟ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಟ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರಿ ವಾಹನಗಳಾದ ಬುಲ್ಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ರ‍್ಟಿಕ್ಯೂಲೇಟೆಡ್ ವಾಹನಗಳು.
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲಾಗುವ ವಾಹನಗಳು, ಶಾಲೆ, ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‌ಗಳು ಸೇರಿದಂತೆ).
ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 116ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕ ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅನುಮತಿಸಿದೆ.
ಚೆಕ್ ಪೋಸ್ಟ್ ರಚಿಸಿ ನಿಗಾ
ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿ ಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‌ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿ ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ. ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.