ವಿವಾದಾತ್ಮಕ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಬೆಳಗಾವಿ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಮಹಾರಾಷ್ಟ್ರ- ಕರ್ನಾಟಕ ನಡುವಿನ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಲಾಪುರದಲ್ಲಿ ಸದ್ಯ ಬೂದಿಮುಚ್ಚಿದ ಕೆಂಡಂತಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿ(ಜೂ.08): ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತಾಗಿ ವಿವಾದಾತ್ಮಕ ಸ್ಟೇಟಸ್ ಹಾಕಿಕೊಂಡ ಪರಿಣಾಮ ಮಹಾರಾಷ್ಟ್ರದ ಹಿಂದು ಪರ ಸಂಘಟನೆಗಳು ಬುಧವಾರ ಕೊಲ್ಲಾಪುರದಲ್ಲಿ ಕರೆ ನೀಡಿದ್ದ ಬಂದ್ ಹಿಂಸಾಚಾರಕ್ಕೆ ತಿರುಗಿತು. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದರಿಂದ ಅದು ಕರ್ನಾಟಕ ಗಡಿ ಪ್ರದೇಶದಲ್ಲಿಯೂ ಪರಿಣಾಮ ಬೀರಿತು. ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ- ಮಹಾರಾಷ್ಟ್ರ ಗಡಿಭಾಗವಾದ ನಿಪ್ಪಾಣಿ, ಬೆಳಗಾವಿ, ಕಾಗವಾಡ, ಅಥಣಿಯಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ಏತನ್ಮಧ್ಯೆ ವಿವಾದಾತ್ಮಕ ಸ್ಟೇಟಸ್ ಹಾಕಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಬೆಳಗಾವಿ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಮಹಾರಾಷ್ಟ್ರ- ಕರ್ನಾಟಕ ನಡುವಿನ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಲಾಪುರದಲ್ಲಿ ಸದ್ಯ ಬೂದಿಮುಚ್ಚಿದ ಕೆಂಡಂತಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಅನುಕೂಲ: ಲಕ್ಷ್ಮಣ ಸವದಿ
ಸಾಮಾಜಿಕ ಮಾಧ್ಯಮಗಳಲ್ಲಿ ಔರಂಗಜೇಬ್ ಹಾಗೂ ಟಿಪ್ಪುವನ್ನು ವೈಭವೀಕರಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್ ಹಾಕಲಾಗಿತ್ತು. ಈ ಪೋಸ್ಟ್ ಹಾಕಿದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರದ ಹಿಂದು ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ. ಕೆಲ ಅಂಗಡಿಗಳು ಹಾಗೂ ವಾಹನಗಳನ್ನು ದೋಚಲಾಗಿದೆ. ಇದರಿಂದಾಗಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರವಾಹ ನಡೆಸಿದ್ದಾರೆ. ಕೊಲ್ಲಾಪುರದಲ್ಲಿ ವಿವಿಧೆಡೆಗಳಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ.
ಹಿಂದು ಪರ ಸಂಘಟನೆಗಳು ಕರೆ ನೀಡಿದ್ದ ಕೊಲ್ಲಾಪುರ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಕೆಲ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಬೆಳಗ್ಗೆ 10 ಗಂಟೆಗೆಗೆ ಕೊಲ್ಲಾಪುರದ ಶಿವಾಜಿ ವೃತ್ತದಲ್ಲಿ ಜಮಾಯಿಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ಎಸೆದರು. ಹಾಗಾಗಿ, ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು. ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಕೂಡ ಪ್ರಯೋಗಿಸಿದರು.
ನಮ್ಮ ಮರಾಠಿ ನೆಲದಲ್ಲಿ ಮೊಘಲ್ ನಾಯಕರ ವೈಭವೀಕರಣವನ್ನು ನಾವು ಎಂದಿಗೂ ಸಹಿಸುವುದಿಲ್ಲ. ಹಿಂದು ಸಮಾಜವನ್ನು ಕಾಪಾಡಲು ನಾವು ಖಡ್ಗಗಳನ್ನು ಎತ್ತಿಕೊಳ್ಳಲು ಸಿದ್ಧರಿದ್ದೇವೆ. ನಾವು ಇದನ್ನು ಎಂದಿಗೂ ಸಹಸಿಕೊಳ್ಳುವುದಿಲ್ಲ. ಭಾರತದಲ್ಲಿ ಹಿಂದೂಗಳು ಸುರಕ್ಷಿತರಾಗಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಾರತದಲ್ಲಿನ ಹಿಂದೂಗಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಅವರು ಪೋಸ್ಟರ್‌ಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದ್ದರಿಂದ ಕೆಲ ಆಸ್ತಿಪಾಸ್ತಿಗಳ ಮೇಲೂ ದಾಳಿ ನಡೆಸಿ ಧ್ವಂಸ ಮಾಡಿದರು. ಘರ್ಷಣೆಯಲ್ಲಿ ಕೆಲ ವಾಹನಗಳು ಕೂಡ ಜಖಂ ಗೊಂಡಿವೆ. ಈ ಘಟನೆ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೊಲ್ಲಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪಂಡಿತ ಮನವಿ ಮಾಡಿದ್ದಾರೆ.
ಕೊಲ್ಲಾಪುರದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ
ಈ ಘಟನೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಮುಂದಿನ 31 ಗಂಟೆ ಕಾಲ ಕೊಲ್ಲಾಪುರದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಲ್ಲಿ ಔರಂಗಿಯ ಇಷ್ಟುಮಕ್ಕಳು ಇದ್ದಕ್ಕಿದ್ದಂತೆ ಎಲ್ಲಿಂದ ಜನಿಸಿದರು? ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಸಾರ್ವಜನಿಕರು ಶಾಂತಿ ಕಾಪಾಡಬೇಕು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು. ಸದ್ಯ ಕೊಲ್ಲಾಪುರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಹಾರಾಷ್ಟ್ರದಲ್ಲಿ ಯಾರಾದರೂ ಔರಂಗಜೇಬನನ್ನು ವೈಭವೀಕರಿಸಿದರೆ, ಸಹಜ ಕೋಪ ಬರುತ್ತದೆ. ಆದರೆ ಯಾರಾದರೂ ಕಾನೂನನ್ನು ತನ್ನ ಕೈಗೆ ತೆಗೆದುಕೊಂಡರೆ ಅದನ್ನು ಬೆಂಬಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಬಸ್ ಸಂಚಾರ ಸ್ಥಗಿತ
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ - ಮಹಾರಾಷ್ಟ್ರ ನಡುವೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸೇವೆ ಸ್ಥಗಿತಗೊಳಿಸಲಾಗಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ, ಬೆಳಗಾವಿ ಸೇರಿದಂತೆ ಕರ್ನಾಟಕ ರಾಜ್ಯದ ಗಡಿಭಾಗದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್ ಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡಬೇಕಾಯಿತು.
ಚಿಕ್ಕೋಡಿಯಲ್ಲಿ ಒಬ್ಬ ವಶಕ್ಕೆ
ಕೊಲ್ಲಾಪುರದಲ್ಲಿ ನಡೆದ ಹಿಂದು ಸಂಘಟನೆಗಳ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದ ಬೆನ್ನಹಿಂದೆಯೇ ಚಿಕ್ಕೋಡಿಯಲ್ಲಿ ವ್ಯಕ್ತಿಯೊಬ್ಬ ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತಾದ ವಿವಾದಾತ್ಮಕ ಪೋಸ್ಟ್‌ಗಳನ್ನು ತನ್ನ ಮೊಬೈಲ್ ಸ್ಟೇಟಸ್‌ನಲ್ಲಿ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲ್ಲಾಪುರದ ಘಟನೆ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್‌ಗಳಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಸಂದೇಶಗಳನ್ನು ಪೋಸ್ಟ್ ಮಾಡುವುದಾಗಲಿ ಹಾಗೂ ಸ್ಟೇಟಸ್ ಹಾಕುವುದಾಗಲಿ ಕಂಡುಬಂದಲ್ಲಿ, ಅಂತವರ ವಿರುದ್ಧ ಐಪಿಸಿ ಕಲಂ 153 ಎ, 295, 295 ಎ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ರಾಜ್ಯ ಆಳೋದು ಒಂದೇ, ಈ ಶಾಸಕನ ಕಂಟ್ರೋಲ್ ಮಾಡೋದು ಒಂದೇ: ಬಿಜೆಪಿ ಶಾಸಕ ಅಭಯ ಪಾಟೀಲ
ವಿವಾದಾತ್ಮಕ ಸ್ಟೇಟಸ್ ಅಪ್‌ಲೋಡ್ ಮಾಡಿದ ಹಿನ್ನೆಲೆಯಲ್ಲಿನೆರೆಯ ಕೊಲ್ಲಾಪುರದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ಗಡಿಭಾಗದ ನಿಪ್ಪಾಣಿ ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ನಿಪ್ಪಾಣಿ ನಗರದಲ್ಲಿ ಬೀಡುಬಿಟ್ಟಿದ್ದು, ಪೆಟ್ರೋಲಿಂಗ್‌ನಲ್ಲಿ ತೊಡಗಿದ್ದಾರೆ. ನಿಪ್ಪಾಣಿಯ ಪ್ರಮುಖ ಬೀದಿಗಳಲ್ಲಿ ಪಾಟೀಲ ರೌಂಡ್ಸ್ ನಡೆಸಿದ್ದು, ಅವರೊಂದಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ವಿವಾದಾತ್ಮಕ ಸ್ಟೇಟಸ್ ಸಂಬಂಧ ನಿಪ್ಪಾಣಿ ನಗರದಲ್ಲಿ ಜುನಾಲ್ ಎಂಬ ಆರೋಪಿ ಮೇಲೆ ದೂರು ದಾಖಲಾಗಿದ್ದು, ಆರೋಪಿತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ನಿಪ್ಪಾಣಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ನಡುವೆ ಎಂದಿನಂತೆಯೇ ಸಾರಿಗೆ ಸೇವೆ ನಿಯಮಿತವಾಗಿ ಸಾಗುತ್ತಿದೆ. ಸಾರ್ವಜನಿಕರು ಯಾರು ಭಯಭೀತರಾಗಬೇಕಿಲ್ಲ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.