ಬೆಂಗಳೂರಿನಲ್ಲಿ ಶೀಘ್ರವೇ ಚುನಾವಣೆಯೊಂದು ನಡೆಯಲಿದೆ. ಈ ಬಗ್ಗೆ ಸರ್ಕಾರಕ್ಕೆ ಹೈ ಕೋರ್ಟಿನಿಂದ ನೋಟಿಸ್ ಜಾರಿ ಮಾಡಲಾಗಿದೆ.
ಬೆಂಗಳೂರು (ಸೆ.24): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆಡಳಿತಾಧಿಕಾರಿ ನೇಮಕ ಆದೇಶ ರದ್ದುಪಡಿಸುವಂತೆ ಮತ್ತು ಪಾಲಿಕೆಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಶಿವರಾಜ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿತು.
ಬಿಎಸ್‌ವೈ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಕುಮಾರಸ್ವಾಮಿ....! ...
ಬಿಬಿಎಂಪಿ ಚುನಾಯಿತ ಸದಸ್ಯರ ಅವಧಿ ಸೆ.10ಕ್ಕೆ ಮುಗಿದಿದೆ. ಅದಕ್ಕೂ ಮುನ್ನ ಚುನಾವಣೆ ನಡೆಸಿ ಹೊಸ ಸದಸ್ಯರ ಆಯ್ಕೆ ಮಾಡಬೇಕಿತ್ತು. ಇನ್ನೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪಾಲಿಕೆಯಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇರಬೇಕಿತ್ತು. ಆದರೆ, ಸರ್ಕಾರ ಚುನಾವಣೆ ಮುಂದೂಡುವ ಉದ್ದೇಶದಿಂದ ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ ಮಾಡಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಅಲ್ಲದೆ, ನಿಗದಿತ ಅವಧಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.