
ಬೆಂಗಳೂರು(ಅ.28): ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರು, ಬಿಬಿಎಂಪಿ ನಗರದಲ್ಲಿ ರಸ್ತೆ ಗುಂಡಿಗಳನ್ನು ಸಮರ್ಪಕ ಹಾಗೂ ವೈಜ್ಞಾನಿಕವಾಗಿ ಮುಚ್ಚುತ್ತಿಲ್ಲ. ಸೂಕ್ತ ರೀತಿಯಲ್ಲಿ ತಂತ್ರಜ್ಞಾನ ಬಳಸುತ್ತಿಲ್ಲ. ರಸ್ತೆ ಗುಂಡಿಗಳಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
Bengaluru: ಮಹದೇವಪುರದಲ್ಲೀಗ ರಸ್ತೆ ಗುಂಡಿ ಗಂಡಾಂತರ!
ಬಿಬಿಎಂಪಿ ಪರ ವಕೀಲರು, ಅರ್ಜಿ ಸಂಬಂಧ ನ್ಯಾಯಾಲಯ ನೀಡಿರುವ ನಿರ್ದೇಶನದ ಅನುಪಾಲನಾ ವರದಿ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ರಸ್ತೆ ಗುಂಡಿಗಳ ಮುಚ್ಚುವ ಪ್ರಕ್ರಿಯೆಯಲ್ಲಿ ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಪಾಲಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ರಸ್ತೆ ಗುಂಡಿ ಮುಚ್ಚಲು ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ. ಎಷ್ಟುಗುಂಡಿ ಮುಚ್ಚಲಾಗಿದೆ. ಈ ವಿಚಾರದಲ್ಲಿ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಯಾರು ಎಂಬ ಬಗ್ಗೆ ಮಾಹಿತಿ ನೀಡಿ ವಿವರವಾದ ಪ್ರಮಾಣ ಪತ್ರ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ನ.2ಕ್ಕೆ ಮುಂದೂಡಿತು.