
ಬೆಂಗಳೂರು: ಇವತ್ತು ಮತ್ತು ನಾಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಂತೆಯೇ ರಾಜ್ಯದ ಆರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಎಚ್ಚರಿಕೆ ನೀಡಲಾಗಿರುವ ಜಿಲ್ಲೆಗಳಲ್ಲಿ ಹುಷಾರಾಗಿರಬೇಕು ಎಂದು ತಿಳಿಸಲಾಗಿದೆ.
ಇನ್ನು ಏಳು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ,ದಕ್ಷಿಣ ಕನ್ನಡ ,ಕೊಡಗು, ಹಾಸನ, ಮೈಸೂರು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಈ ಭಾಗದ ಜನರ ಮಳೆಯನ್ನು ಎದುರಿಸಲು ಮುಂಜಾಗೃತ ಕ್ರಮ ತೆಗೆದು ಕೊಳ್ಳಬೇಕಿದೆ..
ಅಂದಹಾಗೆ ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದು, ಹೆದ್ದಾರಿ ಸಂಚಾರಕ್ಕೂ ಅಡ್ಡಿಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕಿದೆ. ಹವಾಮಾನ ಇಲಾಖೆಯ ಪ್ರಕಾರ.. ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ರಾಮನಗರ, ಚಾಮರಾಜನಗರಗಳಲ್ಲಿ ಗಂಟೆಗೆ 30 ರಿಂದ 40 ಕಿಲೋ ಮೀಟರ್ ಸ್ಪೀಡ್‌ನಲ್ಲಿ ಗಾಳಿ ಬೀಸಲಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಎರಡು ವಾರಗಳಿಂದ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ನಿರಂತರವಾಗಿ ಮಳೆ ಬೀಳುತ್ತಿದೆ. ಸಂಜೆ ವೇಳೆ ಬೀಳುತ್ತಿರೋದ್ರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ರಸ್ತೆಗಳಲ್ಲಿ ನೀರು ನಿಲ್ಲುತ್ತಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಭಾರೀ ಟ್ರಾಫಿಕ್ ಜಾಮ್‌ಗೂ ಮಳೆ ಕಾರಣವಾಗ್ತಿದೆ. ಬೆಂಗಳೂರಿನಲ್ಲಿ ಇವತ್ತು ಮತ್ತು ನಾಳೆ ಮಳೆ ಆಗಲಿದೆ. ಅಕ್ಟೋಬರ್ 26 ರಿಂದ 31 ವರೆಗೆ ಕಡಿಮೆ ಮಳೆ ಆಗಲಿದೆ.
ಹಾಗೆಯೇ ಕರಾವಳಿ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳಬಹುದು. ಇನ್ನು ಕರಾವಳಿ ಭಾಗದಲ್ಲಿ ಇರುವ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಮಲೆನಾಡು ಭಾಗದಲ್ಲಿ ಮಳೆ ಬೀಳುತ್ತಿಲ್ಲ. ಮಳೆಗಾಗಿ ರೈತರು ಕಾದು ಕೂತಿದ್ದಾರೆ. ಕಳೆದ ಒಂದು ವಾರದಿಂದ ಮಳೆಯಾಯನ ಮುಖ ದರ್ಶನ ಆಗಿಲ್ಲ. ಯಾವತ್ತು ಮಳೆ ನಮ್ಮೂರಿನ ಕಡೆಗೆ ಬರಬಹುದು ಅಂತಾ ಕಾದು ಕೂತಿದ್ದಾರೆ ಅಲ್ಲಿನ ರೈತರು.
ಅಂದ್ಹಾಗೆ ರಾಜ್ಯದಲ್ಲಿ ಹಿಂಗಾರು ಮಳೆ ಚುರುಕಾಗಿದೆ. ಸಿಡಿಲು ಬಡಿದು ಒಬ್ಬ ಸಾವನ್ನಪ್ಪಿದ್ದು, ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡ, ಚಿಕ್ಕಮಗಳೂರು ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಗದಗ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಕುರಿಗಾಹಿ ಮಾಬುಸಾಬ್ ಮುಲ್ಲಾನವರ್ (44) ಶುಕ್ರವಾರ ಮೃತಪಟ್ಟಿದ್ದಾರೆ. ಜೊತೆಗೆ 5 ಕುರಿಗಳೂ ಮೃತಪಟ್ಟಿವೆ.