ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರಗಳಿಂದ ಮತ್ತು ಇತರೆ ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರ ಆಗಮನ| ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ|
ಕೊಪ್ಪಳ(ಸೆ.02): ಕೋವಿಡ್-19 ಹಿನ್ನೆಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಸೆ.30ರ ವರೆಗೆ ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.
ಜಂಟಿ ಕಾರ್ಯದರ್ಶಿಗಳು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಭಾರತ ಸರ್ಕಾರ, ನವದೆಹಲಿ ಇವರು ದೇಶಾದ್ಯಂತ ಎಲ್ಲ ಧಾರ್ಮಿಕ ಸ್ಥಳ, ಸಾರ್ವಜನಿಕ ಪೂಜಾ, ಪ್ರಾರ್ಥನಾ ಸ್ಥಳಗಳನ್ನು ಜೂನ್ 8ರಿಂದ ತೆರೆಯಲು ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ. ಆದರೆ, ಕೊಪ್ಪಳ ಜಿಲ್ಲೆಯಲ್ಲಿರುವ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರಗಳಿಂದ ಮತ್ತು ಇತರೆ ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಂಭವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಹರಡದಂತೆ ತಡೆಯುವ ಕುರಿತು ಮುಂಜಾಗೃತಾ ಕ್ರಮವಾಗಿ ಹುಲಿಗೆ ದೇವಸ್ಥಾನದಲ್ಲಿ ಆಗಸ್ಟ್ 31ರ ವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿತ್ತು. ಆ. 27ರಂದು ಜರುಗಿದ ವ್ಯವಸ್ಥಾಪನ ಸಮಿತಿ ಸಭೆಯಲ್ಲಿ ಚರ್ಚಿಸಿ ಈಗಾಗಲೇ ದೇವಸ್ಥಾನದ ಅರ್ಚಕರು ಹಾಗೂ ಕಂಪ್ಯೂಟರ್ ಆಪರೇಟರ್‌ಗೆ ಕೊರೋನಾ ವೈರಸ್ ದೃಢಪಟ್ಟಿದ್ದು, ಪಕ್ಕದ ಜಿಲ್ಲೆಯಾದ ಬಳ್ಳಾರಿ ಮತ್ತು ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಕೂಡ ಸಾಕಷ್ಟು ಪ್ರಕರಣಗಳು ಕಂಡು ಬಂದಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಸೆ. 30ರ ವರೆಗೆ ದೇವಸ್ಥಾನವನ್ನು ತೆರೆಯದೇ ಇರುವುದು ಸೂಕ್ತವೆಂದು ಸಮಿತಿಯು ಸರ್ವಾನುಮತದಿಂದ ನಿರ್ಣಯಿಸಿದೆ.
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಭೇಟಿ
ಅದರಂತೆ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ನಿಷೇಧಿಸುವಂತೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಕೊಪ್ಪಳ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕೋರಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯ ಕಾಪಾಡುವುದಕ್ಕೆ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಸೆ. 30ರ ವರೆಗೆ ನಿಷೇಧಿಸಿ ಈ ಮೂಲಕ ಆದೇಶಿಸಿದೆ.
ಈ ಆದೇಶದನ್ವಯ ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲ ಮುಂಜಾಗ್ರತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶವನ್ನು ಜಾರಿಗೆಗೊಳಿಸಲು ದೇವಸ್ಥಾನ ಆಡಳಿತ ಮಂಡಳಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು ಹಾಗೂ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.