ತಮಿಳುನಾಡಿಗೆ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಅರಸೀಕೆರೆ (ಸೆ.30): ತಮಿಳುನಾಡಿಗೆ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ತಾಲೂಕು ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಹೇಮಂತ್ ಕುಮಾರ್, ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಯಂತೆ ಮಳೆ ಆಗಿಲ್ಲ. ಹಲವರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.
ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ 20 ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ. ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿಯಾಗಿದೆ ಎಂದು ವಿಷಾದಿಸಿದರು. ಬೆಂಗಳೂರಿಗೆ ಪ್ರತಿ ತಿಂಗಳು ಕುಡಿಯುವ ನೀರಿಗೇ ಒಂದೂವರೆ ಟಿಎಂಸಿ ನೀರು ಬೇಕು. ಕಾವೇರಿ ಕಣಿವೆಯ ರೈತರ ಹೊಲ-ಗದ್ದೆಗಳಿಗೆ ನೀರಿಲ್ಲ.
ಶುಚಿಸಂಭ್ರಮ ಕಿಟ್ ಗುಣಮಟ್ಟದ ಬಗ್ಗೆ ಗರಂ ಆದ ಸಿಎಂ: ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ!
ಕೈಗಾರಿಕೆಗಳಿಗೆ ಕೊಡಬೇಕಾದ ನೀರಿಲ್ಲ. ಹೀಗಿರುವಾಗ ಏಳು ಟಿಎಂಸಿ ನೀರು ಎಲ್ಲಿಂದ ತರಲು ಸಾಧ್ಯ? ಮಂಡ್ಯ ಭಾಗದ ರೈತರು ನೀರಿಗೆ ಏನು ಮಾಡಬೇಕು? ಬೆಂಗಳೂರಿನ ಒಂದೂವರೆ ಕೋಟಿ ಜನರು ಕುಡಿಯುವ ನೀರು ಇಲ್ಲದೆ ಸಾಯಬೇಕೆ? ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಯಾವುದೋ ಪ್ರಾಧಿಕಾರದ ಆದೇಶ ದೊಡ್ಡದಾಗಲು ಹೇಗೆ ಸಾಧ್ಯ? ಈ ಪ್ರಾಧಿಕಾರದ ಆದೇಶ ಪಾಲಿಸಲು ಹೋಗಿ ಅವರು ಕೇಳಿದಷ್ಟು ನೀರನ್ನು ಇದುವರೆಗೆ ಬಿಟ್ಟಿದ್ದೇ ರಾಜ್ಯ ಸರ್ಕಾರದ ದೊಡ್ಡ ತಪ್ಪು.
ಈಗಲೂ ಸರ್ಕಾರ ಸ್ಪಷ್ಟ ಧೋರಣೆಯನ್ನು ಪ್ರಕಟಿಸಿದಂತೆ ಕಾಣುತ್ತಿಲ್ಲ. ಈಗಲಾದರೂ ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತಾಡುವುದನ್ನು ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂಬ ದೃಢ ಘೋಷಣೆಯನ್ನು ಮಾಡಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹೇಮಾವತಿ ಜಲಾಶಯದಲ್ಲೂ ನೀರು ಖಾಲಿಯಾಗುತ್ತಾ ಬಂದಿದ್ದು 35 ಟಿಎಂಸಿಯಿಂದ 19 ಟಿಎಂಸಿಗೆ ಬಂದು ನಿಂತಿದೆ. ಹಾಸನ ಜಿಲ್ಲೆಯ ಹಲವಾರು ತಾಲೂಕುಗಳಿಗೆ ಕೃಷಿಗೆ ಮತ್ತು ಕುಡಿಯುವ ನೀರಿಗೆ ಹೇಮಾವತಿ ನದಿ ನೀರೇ ಮುಖ್ಯವಾಗಿದೆ. ಹಾಗಾಗಿ ರೈತರ ಪರವಾದ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು.
ಮತ್ತೆ ನೀರು ಬಿಟ್ಟರೆ ಕುಡಿಯುವ ನೀರೂ ಇಲ್ಲದೆ ಹಾಹಾಕಾರ ಉಂಟಾಗಲಿದೆ. ಅದರಿಂದ ಆಗುವ ಅನಾಹುತಗಳನ್ನು ಊಹಿಸಲೂ ಸಾಧ್ಯವಿಲ್ಲ. ರಾಜ್ಯದ ಎಲ್ಲ ಸಂಸದರೂ ದೆಹಲಿಯಲ್ಲಿ ಧರಣಿ ನಡೆಸಬೇಕು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು, ರಾಜೀನಾಮೆ ನೀಡಲೂ ಸಿದ್ಧವಾಗಿರಬೇಕು ಎಂದು ಒತ್ತಾಯಿಸಿದರು. ಒಂದೊಮ್ಮೆ ಸರ್ಕಾರ ಅಂಥ ದುಸ್ಸಾಹಸಕ್ಕೆ ಕೈಹಾಕಿದರೆ ರಾಜ್ಯದ ಜನರು ದಂಗೆ ಏಳುವ ಸ್ಥಿತಿ ನಿರ್ಮಾಣವಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ತಮ್ಮ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಿದ್ದು ಗ್ಯಾರಂಟಿ ಗುಂಗಿನಲ್ಲಿದ್ದಾರೆ, ಡಿಕೆಶಿಗೆ ನೀರಾವರಿ ಜ್ಞಾನವಿಲ್ಲ: ಸಿ.ಪಿ.ಯೋಗೇಶ್ವರ್
ನಗರ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ ರೈತರ ಪರವಾದ ಸರ್ಕಾರ ತಕ್ಷಣವೇ ನೀರನ್ನು ನಿಲ್ಲಿಸಿ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಬೇಕು ಎಂದರು. ಉಪಾಧ್ಯಕ್ಷ ಮುದುಡಿ ಗಂಗಾಧರ್ ಮಾತನಾಡಿದರು. ನಂತರ ತಹಸೀಲ್ದಾರ್ ಸಂತೋಷ್ ಕುಮಾರ್‌ರವರಿಗೆ ಮನವಿ ಪತ್ರ ಕೊಡಲಾಯಿತು. ಕಾರ್ಯಕರ್ತರಾದ ಯುವ ಘಟಕದ ರಕ್ಷಿತ್ ರಾಘು ಸಂತೋಷ್ ಕಾರ್ಮಿಕ ಘಟಕದ ಮಂಜು ಕೆ ಕೆ ಲೋಕೇಶ್, ಮಂಜು, ರೋಷನ್ ಖಲಂದರ್, ಸಂತೋಷ್ ಮಲದೇವನಹಳ್ಳಿ ಮಂಜು ನವಾಜ್, ರಾಜು ಕೊಪ್ಪಲ್ ಸಿದ್ದೇಶ್ ನಾಯಕ್ ಮುಂತಾದವರಿದ್ದರು.