
ಬೆಳಗಾವಿ (ಆ.18): ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಎಂಟು ತಾಲ್ಲೂಕುಗಳಲ್ಲಿ ನಾಳೆ (ಆಗಸ್ಟ್ 19) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ರಜೆ ಆದೇಶವನ್ನು ಹೊರಡಿಸಿದ್ದಾರೆ. ಮಳೆಯ ಪ್ರಮಾಣ ಹೆಚ್ಚಾಗಿರುವ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಖಾನಾಪುರ, ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲ್ಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಮಳೆ ಮುಂದುವರಿದಿರುವ ಕಾರಣದಿಂದ ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ನದಿಗಳ ನೀರಿನ ಮಟ್ಟವೂ ಏರಿಕೆಯಾಗಿದ್ದು, ಪ್ರವಾಹ ಭೀತಿಯೂ ಎದುರಾಗಿದೆ. ಈ ಪರಿಸ್ಥಿತಿಯಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಳೆ ಕಡಿಮೆಯಾಗುವವರೆಗೂ ಜನರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.
ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಜಿಲ್ಲೆಗಳ ಪಟ್ಟಿ ಇಲ್ಲಿದೆ:
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಗಾಳಿ ಸಮೇತವಾಗಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, 200 ಮಿ.ಮೀ.ಗಿಂತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಕ್ಷಿಣ ಕನ್ನಡ, ಕೊಡಗು, ಹಾಸನ, ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.