
ಚಿಕ್ಕಮಗಳೂರು (ಆ.18): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಮಲೆನಾಡು ಪ್ರದೇಶವಾಗಿರುವ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ-ಮಳೆ ಮುಂದುವರಿಯಲಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆಯೂ (ಆಗಸ್ಟ್ 19) ಹಲವು ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ರಜೆ ಆದೇಶ ಹೊರಡಿಸಿದ್ದು, ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಮತ್ತು ಕಳಸ ತಾಲ್ಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಇರುತ್ತದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ, ಚಿಕ್ಕಮಗಳೂರು ತಾಲ್ಲೂಕಿನ ಮಲೆನಾಡು ಭಾಗಗಳಾದ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಮತ್ತು ಜಾಗರ ಹೋಬಳಿಗಳ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಇಂದು ಕೂಡ ಈ ಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಮಳೆ ಮುಂದುವರಿದ ಕಾರಣ, ನಾಳೆಯೂ ರಜೆಯನ್ನು ವಿಸ್ತರಿಸಲಾಗಿದೆ. ಕೆಲವೆಡೆ ಭಾರೀ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು, ಭೂಕುಸಿತದ ಸಾಧ್ಯತೆಗಳೂ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಹೋಗದಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.
ಕರ್ನಾಟಕದಾದ್ಯಂತ ನಾಳೆ ಮಳೆ ಪ್ರಮಾಣ:
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (30-40 ಕಿ.ಮೀ.) ಅತಿಹೆಚ್ಚು ಮಳೆಯಾಗುವ (ರೆಡ್ ಅಲರ್ಟ್) ಸಾಧ್ಯತೆಯಿದೆ. ಒಂದೆರರಡು ಸ್ಥಳದಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಬೀದರ್, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿಯ ಒಂದೆರಡು ನಿರಂತರ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಭಾರೀ ಮತ್ತು ಹಗುರ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳ ಮಳೆ:
ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಜಿಲ್ಲೆಯ ಕೆಲವೆಡೆ ಹೆಚ್ಚು ಮಳೆಯಾಗಲಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.