
ಬೆಂಗಳೂರು(ನ.06): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 6 ಮತ್ತು 7ರಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಹವಾಮಾನ ಇಲಾಖೆಯ ನವೆಂಬರ್ 6ರ ವರದಿ ಪ್ರಕಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24ರಿಂದ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ.
ನವೆಂಬರ್ 6ರ ಬೆಳಗ್ಗೆ 8.30ರವರೆಗಿನ ಮಳೆ ದಾಖಲೆ ಪ್ರಕಾರ, ಮಂಡ್ಯ ಜಿಲ್ಲೆಯ ಬೆಳ್ಳೂರಿನಲ್ಲಿ 7 ಸೆಂ.ಮೀ. ಭಾರಿ ಮಳೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ 4 ಸೆಂ.ಮೀ., ಕೊಣನೂರಿನಲ್ಲಿ 3 ಸೆಂ.ಮೀ. ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 3 ಸೆಂ.ಮೀ. ಮಳೆ ದಾಖಲಾಗಿದೆ.
ನವೆಂಬರ್ 6ರಂದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿದೆ. ಆದರೆ, ಹವಾಮಾನ ಇಲಾಖೆ ಭಾರಿ ಮಳೆ ಅಥವಾ ಬಿರುಗಾಳಿ ಎಚ್ಚರಿಕೆ ನೀಡಿಲ್ಲ. ನವೆಂಬರ್ 9ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್ 11 ಮತ್ತು 12ರಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.