Tumakuru: ಅಮಾನಿಕೆರೆಯಲ್ಲಿ ಕಯಾಕಿಂಗ್‌ ಕನೋಯಿಂಗ್‌ ಕಲರವ, ಮಕ್ಕಳಿಗೆ ಕಯಾಕಿಂಗ್‌ ತರಬೇತಿಗೆ ಡಿಸಿಎಂ ಪರಂ ಆಸಕ್ತಿ

Published : Oct 26, 2026, 11:15 AM IST
Tumakuru amani lake

ಸಾರಾಂಶ

ತುಮಕೂರಿನ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡಲು ಕಯಾಕಿಂಗ್–ಕನೋಯಿಂಗ್ ತರಬೇತಿ ಅಕಾಡೆಮಿಯನ್ನು ಪ್ರಾರಂಭಿಸಲಾಗಿದೆ. ಬೆಂಗಳೂರಿನ ತರಬೇತುದಾರರು ಶಾಲಾ ಮಕ್ಕಳಿಗೆ ತರಬೇತಿ ನೀಡುತ್ತಿದ್ದು, ಇವರು ಮುಂಬರುವ ಮಿನಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ತುಮಕೂರನ್ನು ಕ್ರೀಡಾ ಕ್ಷೇತ್ರದಲ್ಲಿ ಮಾದರಿಯಾಗಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ.

ತುಮಕೂರು: ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಕಯಾಕಿಂಗ್–ಕನೋಯಿಂಗ್ ತರಬೇತಿ ಅಕಾಡೆಮಿಯನ್ನು ಪ್ರಾರಂಭಿಸಲಾಗಿದ್ದು. ಕರ್ನಾಟಕ ಸ್ಟೇಟ್ ಒಲಿಂಪಿಕ್ಸ್ ಅಸೋಸಿಯೇಷನ್ ಕಾರ್ಯದರ್ಶಿಗಳು ಕಯಾಕಿಂಗ್– ಕನೋಯಿಂಗ್ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವ ಸ್ಪರ್ಧಿಗಳ ತಂಡವನ್ನು ರೂಪಿಸುವ ಗುರಿ ಹೊಂದಿದ್ದಾರೆ.

ವಿದ್ಯಾರ್ಥಿಗಳಿಗೆ ಬೆಂಗಳೂರಿನಿಂದ ಬಂದು ತರಬೇತಿ ಕೊಡುತ್ತಿರುವ ಸಿಬ್ಬಂದಿ

ಉಪಮುಖ್ಯಮಂತ್ರಿ ಹಾಗೂ ಕಂದಾಯ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಅವರು ಅಮಾನಿಕೆರೆಯನ್ನು ಸೆಂಟರ್ ಆಫ್ ಎಕ್ಸಲೆನ್ಸ್ ಎಂದು ಘೋಷಿಸಿರುವುದು ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ನೀಡಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಶಾಲಾ-ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳನ್ನು ಈ ವಿಶಿಷ್ಟ ಜಲಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.

ಎರಡು ಬ್ಯಾಚ್‌ಗಳಲ್ಲಿ ಮಕ್ಕಳಿಗೆ ತರಬೇತಿ

ಇದರ ಫಲವಾಗಿ ಕಳೆದ 15 ದಿನಗಳಿಂದ 10ರಿಂದ 14 ವರ್ಷದ ಮಕ್ಕಳಿಗೆ ಕಯಾಕಿಂಗ್–ಕನೋಯಿಂಗ್ ಕ್ರೀಡೆಯಲ್ಲಿ ತರಬೇತಿ ನೀಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿರುವ ತರಬೇತುದಾರರು ತುಮಕೂರಿನಲ್ಲಿಯೇ ವಾಸ್ತವ್ಯ ಹೂಡಿ, ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಹಾಗೂ ಸಂಜೆ 4ರಿಂದ 6 ಗಂಟೆಯವರೆಗೆ ಎರಡು ಬ್ಯಾಚ್‌ಗಳಲ್ಲಿ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಈ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದು, ಪ್ರಸ್ತುತ ತರಬೇತಿ ಪಡೆಯುತ್ತಿರುವ ಮಕ್ಕಳು ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಮಿನಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ.

ಮಕ್ಕಳಿಗೆ ಗುಣಮಟ್ಟದ ತರಬೇತಿ ನೀಡಿ

ಸುಮಾರು 8 ಎಕರೆ ವಿಸ್ತೀರ್ಣದ ಅಮಾನಿಕೆರೆಯನ್ನು ಸ್ವಚ್ಛಗೊಳಿಸಿ, ಕಯಾಕಿಂಗ್–ಕನೋಯಿಂಗ್ ತರಬೇತಿ ಅಕಾಡೆಮಿಯನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವುದು ಜಿಲ್ಲಾಡಳಿತದ ಉದ್ದೇಶವಾಗಿದೆ. ಇದಕ್ಕಾಗಿ ಅಗತ್ಯ ದೋಣಿಗಳ ವ್ಯವಸ್ಥೆ, ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ತರಬೇತುದಾರರ ಸೇವೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಸಿದ್ಧವಿದೆ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಮಕ್ಕಳಿಗೆ ಗುಣಮಟ್ಟದ ತರಬೇತಿ ನೀಡಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯವಿರುವ ತಂಡವನ್ನು ರೂಪಿಸುವ ಗುರಿ ಹೊಂದಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ಯುವಜನತೆಯನ್ನು ಕ್ರೀಡೆಗಳತ್ತ ಆಕರ್ಷಿಸುವುದು ಜಿಲ್ಲಾಡಳಿತದ ಪ್ರಮುಖ ಆಶಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪೋಷಕರು ತಮ್ಮ ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಹಾಗೂ ಅಮಾನಿಕೆರೆಯಲ್ಲಿ ನಡೆಯುತ್ತಿರುವ ಕಯಾಕಿಂಗ್–ಕನೋಯಿಂಗ್ ತರಬೇತಿಯಲ್ಲಿ ಮಕ್ಕಳು ಭಾಗವಹಿಸುವಂತೆ ಉತ್ತೇಜಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಉಪಮುಖ್ಯಮಂತ್ರಿ ಪರಮೇಶ್ವರ್ ಕನಸು

ಬೆಂಗಳೂರಿನಿಂದ ತರಬೇತುದಾರರು ಪ್ರತಿದಿನ ಮುಂಜಾನೆ 4 ಗಂಟೆಗೆ ಪ್ರಯಾಣಿಸಿ ಅಮಾನಿಕೆರೆಯಲ್ಲಿ ಮಕ್ಕಳಿಗೆ ತರಬೇತಿ ನೀಡುತ್ತಿರುವುದು ಈ ಕ್ರೀಡೆಯ ಬೆಳವಣಿಗೆಯ ಬಗ್ಗೆ ತೋರುತ್ತಿರುವ ಬದ್ಧತೆಗೆ ಸಾಕ್ಷಿಯಾಗಿದೆ. ತುಮಕೂರು ಕೇವಲ ಶೈಕ್ಷಣಿಕ ಜಿಲ್ಲೆಯಾಗಿ ಉಳಿಯದೆ, ಕ್ರೀಡಾ ಕ್ಷೇತ್ರದಲ್ಲಿಯೂ ರಾಜ್ಯಕ್ಕೆ ಮಾದರಿಯಾಗಬೇಕು ಎಂಬುದು ಉಪಮುಖ್ಯಮಂತ್ರಿ ಪರಮೇಶ್ವರ್ ಕನಸಾಗಿದೆ. ಈ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುತ್ತಿರುವುದು ಮಹತ್ವದ ಹೆಜ್ಜೆಯಾಗಿದ್ದು, ಇದಕ್ಕೆ ಜಿಲ್ಲೆಯ ಸಾರ್ವಜನಿಕರು, ಪೋಷಕರು, ಶಿಕ್ಷಣ ಸಂಸ್ಥೆಗಳು ಹಾಗೂ ಕ್ರೀಡಾಸಕ್ತರು ಸಹಕಾರ ನೀಡಬೇಕೆಂದು ಜಿಲ್ಲಾಡಳಿತ ಕೋರಿದೆ.

PREV
Read more Articles on
click me!

Recommended Stories

9 ವರ್ಷಗಳ ಮುಂಬೈ ಬದುಕು ಬಿಟ್ಟು ಬೆಂಗಳೂರಿಗೆ ಸ್ಟ್ಯಾಂಡಪ್ ಕಾಮಿಡಿಯನ್ ಶಿಫ್ಟ್! ಕನ್ನಡ ನೆಲವೇಕೆಂದು ಬಿಚ್ಚಿಟ್ರು ಕಾರಣ
Shivamogga: ಮಲೆನಾಡಿನಲ್ಲಿ ಭೂತಾಯಿಗೆ ಸೀಮಂತ : ಭೂಮಿ ಹುಣ್ಣಿಮೆಯ ವಿಶಿಷ್ಟ ಆಚರಣೆ