
ಕೊಡಗು (ಸೆ.24): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿದ್ದು, ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ನಡೆದಿದೆ.
ದೀಪಿಕಾ ದೇಚಮ್ಮ (32) ಗುಂಡೇಟಿನಿಂದ ಗಾಯಗೊಂಡಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕೂಡಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಗುಂಡು ಹಾರಿಸಿದ ಆರೋಪಿ, ಯೋಧ ವಿನು ಕಾರ್ಯಪ್ಪ ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರ ನಡುವೆ ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ವಿನು ಕಾರ್ಯಪ್ಪ ತನ್ನ ಬಂದೂಕಿನಿಂದ ದೀಪಿಕಾ ಅವರಿಗೆ ಗುಂಡು ಹಾರಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವಿನು ಕಾರ್ಯಪ್ಪನ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಘಟನೆ ಸ್ಥಳೀಯವಾಗಿ ತೀವ್ರ ಆತಂಕಕ್ಕೆ ಕಾರಣವಾಗಿದೆ.