ಬಾಲಕಿಯರ ಹಾಸ್ಟೆಲ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 16 ವರ್ಷದ ವಿದ್ಯಾರ್ಥಿನಿ!

Published : Nov 26, 2025, 11:34 AM IST
Koppal Hostel student

ಸಾರಾಂಶ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಅಮಾನವೀಯ ಘಟನೆಯು ಸಿಬ್ಬಂದಿಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದ್ದು, ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ.

ಕೊಪ್ಪಳ (ನ.26): ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಓದುತ್ತಿದ್ದ 16 ವರ್ಷದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ.

ಕುಕನೂರು ತಾಲೂಕಿನ ಇಟಗಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು, ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವುದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಬಾಲಕಿಯ ಹೆರಿಗೆ ವಸತಿ ನಿಲಯದ ಆವರಣದಲ್ಲಿಯೇ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದು ವಸತಿ ನಿಲಯದ ಸಿಬ್ಬಂದಿಗಳ ನಿರ್ಲಕ್ಷ್ಯ ಮತ್ತು ಕಾರ್ಯವೈಖರಿಯ ಮೇಲೆ ತೀವ್ರ ಅನುಮಾನವನ್ನು ಹುಟ್ಟುಹಾಕಿದೆ.

ತಾಯಿ-ಮಗು ಆಸ್ಪತ್ರೆಗೆ ದಾಖಲು

ಹೆರಿಗೆಯಾದ ನಂತರ ತಾಯಿ ಮತ್ತು ನವಜಾತ ಗಂಡು ಮಗುವನ್ನು ಕೊಪ್ಪಳದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಬಾಲಕಿ ಕುಕನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬ ಮಾಹಿತಿ ಇದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, 16 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದು ಮತ್ತು ಹೆರಿಗೆಯಾಗಿದ್ದು ವಸತಿ ನಿಲಯದ ಸಿಬ್ಬಂದಿಗಳಿಗೆ ಏಕೆ ತಿಳಿದಿಲ್ಲ ಎಂಬ ಪ್ರಶ್ನೆ ಇದೀಗ ದೊಡ್ಡದಾಗಿದೆ.

ಜಿಲ್ಲಾಧಿಕಾರಿ, ಎಸ್ಪಿ ಭೇಟಿ:

ಈ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ರಾಮ್ ಎಲ್ ಅರಸಿದ್ದಿ ಅವರು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದ್ದಾರೆ. ಈ ಗಂಭೀರ ಪ್ರಕರಣದ ಕುರಿತು ತೀವ್ರ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಘಟನೆ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಕೂಡಲೇ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಬಾಲಕಿ ಗರ್ಭಿಣಿಯಾಗಲು ಕಾರಣನಾದ ಯುವಕನ ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಹಾಸ್ಟೆಲ್ ಸಿಬ್ಬಂದಿ ಮೇಲೆ ದೂರು ಸಾಧ್ಯತೆ:

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ನಿಲಯದ ಮೇಲ್ವಿಚಾರಕರು ಹಾಗೂ ಇನ್ನಿತರ ಸಿಬ್ಬಂದಿಗಳ ಮೇಲೆ ದೂರು ದಾಖಲಾಗುವ ಸಾಧ್ಯತೆ ಇದೆ. ಅಪ್ರಾಪ್ತ ಬಾಲಕಿಯ ಸುರಕ್ಷತೆ ಮತ್ತು ಜವಾಬ್ದಾರಿಯನ್ನು ಸಂಪೂರ್ಣವಾಗಿ ಹೊಂದಿದ್ದ ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಬಾಲಕಿಯ ಆರೋಗ್ಯ, ಮಾನಸಿಕ ಸ್ಥಿತಿ ಮತ್ತು ಆಕೆಯ ಭವಿಷ್ಯಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಈ ಘಟನೆಯು ರಾಜ್ಯದ ವಸತಿ ನಿಲಯಗಳಲ್ಲಿನ ಸುರಕ್ಷತಾ ವ್ಯವಸ್ಥೆಯ ಲೋಪದೋಷಗಳನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಬಾಲಕಿಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ.

PREV
Read more Articles on
click me!

Recommended Stories

Justice for Bongo: ಮಗು ಹುಟ್ಟಿದ್ದಕ್ಕೆ ಸಾಕಿ ಸಲುಹಿದ ಶ್ವಾನ ಕೊಂದ್ರಾ ಪಾಪಿಗಳು? ಸಿಲಿಕಾನ್ ಸಿಟಿಯಲ್ಲಿ 'ಬೋಂಗೋ' ಸಾವಿನ ರೋಚಕ ಕಹಾನಿ!
ಪಬ್‌ನಲ್ಲಿ ಶಾರುಖ್ ಪುತ್ರನ ದುರ್ವರ್ತನೆ ಕೇಸ್: ಆರ್ಯನ್ ಖಾನ್ ಸೇರಿ ಮೂವರ ವಿರುದ್ಧ ಹಿಂದೂ ಮುಖಂಡನಿಂದ ದೂರು