
ಕೊಪ್ಪಳ (ಸೆ.20): ಮದುವೆಯಾಗಲು ಕನ್ಯೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನನೊಂದು ಕೃಷಿಕ ಯುವಕನೊಬ್ಬ ವಿಷ ಸೇವಿಸಿ ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಲಕಮಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು 39 ವರ್ಷದ ಈರಪ್ಪ ಎಂದು ಗುರುತಿಸಲಾಗಿದೆ. 39 ವರ್ಷವಾದರೂ ಮದುವೆಯಾಗದಿರುವ ವಿಚಾರದಿಂದ ಈರಪ್ಪ ಮನನೊಂದಿದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಈರಪ್ಪ ಅವರು ಮದುವೆ ವಿಚಾರವಾಗಿ ಹಲವು ಬಾರಿ ಸಂಬಂಧಿಕರಿಗೆ ಫೋನ್ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದರು ಎನ್ನಲಾಗಿದೆ. ಬಳಿಕ ವಿಷ ಸೇವಿಸಿ ಆತ್ಮ*ತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈರಪ್ಪ ಅವರ ಮಾವ ಚಂದ್ರಹಾದ್ ಅವರು ಕುಕನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನು ಆತ್ಮ*ತ್ಯೆಗೆ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರ ವಿವರಗಳನ್ನು ಪೊಲೀಸರು ತನಿಖೆಯ ಮೂಲಕ ಪರಿಶೀಲಿಸುತ್ತಿದ್ದಾರೆ.