
ಚಿಕ್ಕಮಗಳೂರು (ಮಾ.3): ಕಾಫಿನಾಡು ಚಿಕ್ಕಮಗಳೂರಿನಲ್ಲಿ KRTC ಬಸ್ ಬೆಂಕಿಗಾಹುತಿಯಾಗಿದ್ದು, ದೊಡ್ಡ ಮಟ್ಟದ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 32 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಜೂನಿಯರ್ ಕಾಲೇಜ್ ಬಳಿ ಈ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಹಾಸನಕ್ಕೆ ಹೊರಟಿದ್ದ ಸರ್ಕಾರಿ ಬಸ್ಸಿನಲ್ಲಿ ತಾಂತ್ರಿಕ ದೋಷದಿಂದಾಗಿ ಡೀಸೆಲ್ ಸೋರಿಕೆಯಾಗಿತ್ತು ಎನ್ನಲಾಗಿದೆ. ವಿಪರೀತ ಬಿಸಿಲ ಧಗೆ ಹಾಗೂ ಡೀಸೆಲ್ ಲೀಕ್ ಆದ ಪರಿಣಾಮವಾಗಿ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಬಸ್ಸಿನ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಚಾಲಕ ತಕ್ಷಣವೇ ಬಸ್ಸನ್ನು ನಿಲ್ಲಿಸಿ ಪ್ರಯಾಣಿಕರಿಗೆ ಇಳಿಯುವಂತೆ ಸೂಚಿಸಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ 32 ಪ್ರಯಾಣಿಕರು ಕೂಡಲೇ ಕೆಳಗಿಳಿದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನೋಡನೋಡುತ್ತಿದ್ದಂತೆ ಬೆಂಕಿ ಇಡೀ ಬಸ್ಸಿಗೆ ಆವರಿಸಿ, ಪ್ರಯಾಣಿಕರಲ್ಲಿ ಆತಂಕ ಮೂಡಿಸಿತ್ತು.
ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ
ಸರ್ಕಾರಿ ಬಸ್‌ಗಳ ಸರಿಯಾದ ನಿರ್ವಹಣೆ (Maintenance) ಇಲ್ಲದ ಕಾರಣದಿಂದಲೇ ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ ಎಂದು ಸ್ಥಳೀಯರು ಮತ್ತು ಪ್ರಯಾಣಿಕರು ಆರೋಪಿಸಿದ್ದಾರೆ. ಹಳೆಯ ಬಸ್‌ಗಳನ್ನು ರಸ್ತೆಗೆ ಇಳಿಸಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.