ಜಿಲ್ಲೆಯಲ್ಲಿ ಕೈಗಾರಿಕೆಗಳು ಒಂದೇ ಕಡೆ ಇರುವಂತೆ ಕೈಗಾರಿಕೆ ಹಬ್ ಮಾಡಲು ಕಲಬುರಗಿ ವಿಮಾನ ನಿಲ್ದಾಣ ಬಳಿ 1000 ಎಕರೆ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು.
ಕಲಬುರಗಿ,ಆ.15: ಜಿಲ್ಲೆಯಲ್ಲಿ ಕೈಗಾರಿಕೆಗಳು ಒಂದೇ ಕಡೆ ಇರುವಂತೆ ಕೈಗಾರಿಕೆ ಹಬ್ ಮಾಡಲು ಕಲಬುರಗಿ ವಿಮಾನ ನಿಲ್ದಾಣ ಬಳಿ 1000 ಎಕರೆ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು. ರವಿವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ಮಾಡಿ, ಪರೇಡ್ ಕಮಾಂಡರ ಡಿ.ಎ.ಆರ್ ಮೀಸಲು ಪಡೆಯ ಆರ್.ಪಿ.ಐ ಹಣಮಂತ ನಾಯಕ ಮತ್ತು ಸಹಾಯಕ ಪರೇಡ್ ಕಮಾಂಡರ ಆರ್.ಎಸ್.ಐ. ದುರ್ಗಾಸಿಂಹ ನೇತೃತ್ವದ ವಿವಿಧ 11 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.\
ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ
ರಾಜ್ಯದಲ್ಲಿ ಉದ್ಯೋಗ ಸೃಜನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಇದಕ್ಕಾಗಿ ಉದ್ಯಮ ಸ್ನೇಹಿ ಕೈಗಾರಿಕಾ ನೀತಿ ಜಾರಿಗೊಳಿಸಲಾಗಿದೆ. ನೇರ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕಳೆದ ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ದೇಶದಲ್ಲಿನ ಒಟ್ಟು ಪಾಲಿನಲ್ಲಿ ಶೇ.42 ರಷ್ಟು ಕರ್ನಾಟಕಕ್ಕೆ ಲಭಿಸಿದೆ ಎಂದರು.
ದಾವೋಸ್ ಆರ್ಥಿಕ ಶೃಂಗ(Davos world economic forum) ಫಲಪ್ರದವಾಗಿದ್ದು, ಮುಂದಿನ 3-4 ತಿಂಗಳಿನಲ್ಲಿ 1 ಲಕ್ಷ ಕೋಟಿ ರೂ. ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಇದಲ್ಲದೆ ಬರುವ ನವೆಂಬರ್ 2 ರಿಂದ 4ರ ವರೆಗೆ ಸಿಲಿಕಾನ್ ಸಿಟಿ(silicon city) ಬೆಂಗಳೂರಿ(Bangaluru)ನಲ್ಲಿ ವಿಶ್ವ ಬಂಡವಾಳದಾರರ ಸಮಾವೇಶ ಆಯೋಜಿಸಿದ್ದು, 5 ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ ಹೊಂದಿದ್ದೇವೆ. ಇದಕ್ಕಾಗಿ ಜಪಾನ್, ದಕ್ಷಿಣ ಕೋರಿಯಾ ದೇಶದಲ್ಲಿ ಈಗಾಗಲೇ ರೋಡ್ ಶೋ ಮಾಡಿ ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಕೈಗಾರಿಕೆ ಸ್ನೇಹಿ ವಾತಾವರಣದ ಬಗ್ಗೆ ಪ್ರತಿಷ್ಟಿತ ಕಂಪನಿಗಳಿಗೆ ಮನವರಿಕೆ ಮಾಡಿ ಆಹ್ವಾನ ನೀಡಿದ್ದೇವೆ ಎಂದು ಸಚಿವ ಡಾ.ಮುರುಗೇಶ ನಿರಾಣಿ ತಿಳಿಸಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ(Independence Amrit Mahotsava) ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ, ಬಲಿದಾನ ನೀಡಿದ ಮಹಾನ್ ಪುರುಷರನ್ನು ತಮ್ಮ ಭಾಷಣದಲ್ಲಿ ಸ್ಮರಿಸಿದ ಸಚಿವರು ದೇಶಭಕ್ತಿ ಹೆಚ್ಚಿಸಲು ಕರೆ ನೀಡಿದ “ಹರ್ ಘರ್ ತಿರಂಗಾ” ಅಭಿಯಾನದಡಿ ಕಳೆದ ಮೂರು ದಿನಗಳಿಂದ ಜಿಲ್ಲೆಯ ಪ್ರತಿ ಮನೆ-ಮನೆಗಳ ಮೇಲೆ, ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ಪಂಚಾಯತಿ, ಅಂಗನವಾಡಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಜಿಲ್ಲೆಯ ಜನತೆ ಅತೀ ಉತ್ಸಾಹದಿಂದ ಈ ಅಭಿಯಾನದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುವೆ ಎಂದರು.
Davos 2022: ಉದ್ದಿಮೆಗಳಿಗೆ ಕರ್ನಾಟಕ ತುಂಬಾ ಸೇಫ್: ಸಿಎಂ ಬೊಮ್ಮಾಯಿ
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಡಿ.ಬಿ.ಗೆ ದಾಖಲೆ ಪ್ರಮಾಣದಲ್ಲಿ 3,000 ಕೋಟಿ ರೂ. ಅನುದಾನ ನೀಡಲಾಗಿದೆ. ಇಡೀ ದೇಶ ಸ್ವಾತಂತ್ರ್ಯ ಪಡೆದರು, ಕಲ್ಯಾಣ ಕರ್ನಾಟಕ ಮಾತ್ರ ಒಂದು ವರ್ಷ ಒಂದು ತಿಂಗಳ ತಡವಾಗಿ ಸ್ವಾತಂತ್ರ್ಯದ ರುಚಿ ಕಂಡಿದೆ. ಹೀಗಾಗಿ ಇದೇ ಸೆಪ್ಟೆಂಬರ್ 17 ರಂದು ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಿಜೃಂಭಣೆಯಿಂದ “ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ” ನಡೆಸಲು ಉದ್ದೇಶಿಸಿದೆ ಎಂದರು.
ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಠಿಯಿಂದ 1860ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಈ ಪೈಕಿ 1400ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ 10 ಸಾವಿರ ರೂ. ತಕ್ಷಣ ಪರಿಹಾರ ನೀಡಲಾಗಿದೆ. ಮಳೆಯಿಂದ ಜೀವ ಕಳೆದುಕೊಂಡ 6 ಮೃತರ ಅವಲಂಭಿತರಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದೆ. ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಳೆ ಹಾನಿ ಅಂದಾಜಿಸಿದ್ದು, ಜಂಟಿ ಸಮೀಕ್ಷೆ ಮಾಡಲಾಗುತ್ತಿದೆ. ನೆರೆ ಹಾವಳಿ ಪರಿಹಾರಕ್ಕೆ ಡಿ.ಸಿ. ಖಾತೆಯಲ್ಲಿ 41 ಕೋಟಿ ರೂ. ಹಣ ಇದೆ. ಹೀಗಾಗಿ ನೆರೆ ಹಾವಳಿ ಪರಿಹಾರಕ್ಕೆ ಅನುದಾನದ ಕೊರತೆಯಿಲ್ಲ.
ಸ್ಪಂದನ ಕಲಬುರಗಿಗೆ ಮೆಚ್ಚುಗೆ:
ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮಕ್ಷಮ ಆಲಿಸುವ, ವಿವಿಧ ಸೌಲಭ್ಯಗಳನ್ನು ವಿತರಿಸುವ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವ “ಸ್ಪಂದನ ಕಲಬುರಗಿ” ಎಂಬ ವಿನೂತನ ಕಾರ್ಯಕ್ರಮ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಪ್ರಾರಂಭಿಸಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಇದನ್ನು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೂ ವಿಸ್ತರಣೆಗೆ ಸಲಹೆ ನೀಡಿದರು.