
ವರದಿ: ಕೆ.ಎಂ.ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾಸನ
ಹಾಸನ (ಫೆ.17): ಹಾಸನ ವಿಶ್ವವಿದ್ಯಾಲಯ ಮುಚ್ಚಲು ಮುಂದಾಗಿರುವ ಸರ್ಕಾರದ ನಿರ್ಧಾರ ವಿರೋಧಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ವಿವಿ ಮುಂದೆ ಪ್ರತಿಭಟನೆ ನಡೆಸಿದರು. ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಬಳಿಯಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕಾರ ಧರಣಿ ನಡೆಸಿದರು. ಉಪನ್ಯಾಸಕರು ಕೂಡ ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಯಾವುದೇ ಕಾರಣಕ್ಕೂ ವಿವಿ ಬಂದ್ ಮಾಡಬಾರದು ಎಂದು ಮನವಿ ಮಾಡಿದರು.
ಈ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಎರಡು ವರ್ಷಗಳ ಹಿಂದಷ್ಟೇ ಕಾರ್ಯಾರಂಭ ಮಾಡಿರುವ ಹಾಸನ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಒತ್ತಾಯಿಸಿದರು. ವಿಶ್ವವಿದ್ಯಾಲಯ ಬಂದ್ ಮಾಡಿದರೆ ಉಗ್ರ ಹೋರಾಟ ನಡೆಯಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಹಾಸನ ವಿವಿ ಬಂದ್ ಮಾಡಿದರೆ ಜಿಲ್ಲೆಯ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ.
ವಿಶ್ವವಿದ್ಯಾಲಯ ಹಾಸನ ಕೇಂದ್ರದಲ್ಲಿಯೇ ಇರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ ಎಂದರು. ಆದರೀಗ ಸರ್ಕಾರದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳು ಪಕ್ಕದ ಜಿಲ್ಲೆ ಅಥವಾ ರಾಜಧಾನಿಗೆ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯಲು ಹೋಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರ ಬದಲಿಸಿ ಹಾಸನ ವಿವಿಯನ್ನು ಇಲ್ಲೇ ಉಳಿಸಬೇಕು ಎಂದು ಆಗ್ರಹಿಸಿದರು.
ಒಳ್ಳೆಯ ಕೆಲಸಗಳಿಗೆ ಭಗವಂತ ಯಾವ ರೂಪದಲ್ಲಾದರೂ ಸಹಾಯ ಮಾಡುತ್ತಾನೆ: ನಿಖಿಲ್ ಕುಮಾರಸ್ವಾಮಿ
ಪ್ರತಿಭಟನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಪುಷ್ಪಾವತಿ, ಅಶೋಕ್, ಪ್ರೇಮ್‌ಕುಮಾರ್, ಲೋಕೇಶ್, ಮಹೇಶ್, ವಸಂತ ಕುಮಾರ್, ವಿನಯ್, ರಾಮಚಂದ್ರ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು. ಸರ್ಕಾರದ ಈ ನಿರ್ಧಾರದ ವಿರುದ್ದ ತಿರುಗಿಬಿದ್ದಿರುವ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಮುಂದಿನ ಹಂತದಲ್ಲಿ ಪ್ರತಿಭಟನೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದೆ. ಇದಾದ ಬಳಿಕ ಸರ್ಕಾರದ ನಡೆಯೇನು ಎಂಬುದು ಕುತೂಹಲ ಮೂಡಿಸಿದೆ.