ನಾನು ರಾಜೀನಾಮೆ ನೀಡಲು ಇದೇ ಪ್ರಮುಖ ಕಾರಣ ಎಂದು ತಮ್ಮ ರಾಜೀನಾಮೆ ಹಿಂದಿನ ಕಾರಣವನ್ನು ಇದೀಗ ಅನರ್ಹ ಶಾಸಕ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು [ಅ.04]: ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಕನಕಪುರ ತಾಲೂಕಿಗೆ ಸ್ಥಳಾಂತರಗೊಂಡಿದ್ದ ವೈದ್ಯಕೀಯ ಕಾಲೇಜನ್ನು ಚಿಕ್ಕಬಳ್ಳಾಪುರದಲ್ಲಿ ಸ್ಥಾಪಿಸಲು ಅಗತ್ಯ ಜಮೀನು ಮಂಜೂರು ಮಾಡಿ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಬಜೆಟ್‌ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಿಸಲಾಗಿತ್ತು. ಇದನ್ನು ಸಮ್ಮಿಶ್ರ ಸರ್ಕಾರದಲ್ಲಿ ಏಕಾಏಕಿ ಕನಕಪುರ ತಾಲೂಕಿಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ಪ್ರತಿಭಟಿಸಿಯೇ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜಿಗೆ ಜಮೀನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ರಾಮನಗರ ಜಿಲ್ಲೆಗೆ ಈಗಾಗಲೇ ಒಂದು ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗಿದೆ. ಅದನ್ನು ಹೊರತುಪಡಿಸಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿಗೆ ಮತ್ತೊಂದು ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದರು. ಬಿಜೆಪಿ ಸರ್ಕಾರವು ತಾಲೂಕಿಗೊಂದು ವೈದ್ಯಕೀಯ ಕಾಲೇಜು ನೀಡುವ ಮೊದಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ನೀಡಬೇಕು ಎಂಬ ದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀಡಿದೆ ಎಂದು ಹೇಳಿದರು.