ಸರ್ಕಾರಗಳ ಜನ, ರೈತ ವಿರೋಧಿ ನೀತಿಗಳ ಪರಿಣಾಮ ಇಂದು ಕೃಷಿ ವಲಯವು ಸಾಕಷ್ಟು ಸವಾಲುಗಳನ್ನು ಎದುರಿಸುವಂತಾಗಿದ್ದು, ಅವುಗಳೆಲ್ಲವನ್ನು ಎದುರಿಸಲು ಸನ್ನದ್ಧರಾಗಬೇಕು ಕೇವಲ ಕೃಷಿ ಕಾಯಕದಲ್ಲಿ ತೊಡಗಿಕೊಳ್ಳದೆ ಕಚ್ಚಾ ಉತ್ಪನ್ನಗಳಿಂದ ವಸ್ತುಗಳನ್ನು ತಯಾರಿಸಲು ಸಣ್ಣ-ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸುವುದರ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ಅಗತ್ಯವಿದೆ: ಮೇಲುಕೋಟೆ ಶಾಸಕ, ರೈತ ಮುಖಂಡ ದರ್ಶನ್ ಪಟ್ಟಣ್ಣಯ್ಯ
ರಾಯಚೂರು(ಡಿ.24): ರೈತರು ಆಧುನಿಕ ಸವಾಲುಗಳನ್ನು ಮೆಟ್ಟಿನಿಂತು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಮೇಲುಕೋಟೆ ಶಾಸಕ, ರೈತ ಮುಖಂಡ ದರ್ಶನ್ ಪಟ್ಟಣ್ಣಯ್ಯ ಸಲಹೆ ನೀಡಿದರು. ಸ್ಥಳೀಯ ವೀರಶೈವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸಂಘ ರಾಜ್ಯ ಹಾಗೂ ಜಿಲ್ಲಾ ಸಮಿತಿಗಳ ಸಹಯೋಗದಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಹಾಗೂ ಮಾಜಿ ಪ್ರಧಾನಿ ಚೌಧರಿ ಚರಣಸಿಂಗ್ ಜನ್ಮದಿನಾಚರಣೆಯ ನಿಮಿತ್ತ ಶನಿವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ರೈತ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರಗಳ ಜನ, ರೈತ ವಿರೋಧಿ ನೀತಿಗಳ ಪರಿಣಾಮ ಇಂದು ಕೃಷಿ ವಲಯವು ಸಾಕಷ್ಟು ಸವಾಲುಗಳನ್ನು ಎದುರಿಸುವಂತಾಗಿದ್ದು, ಅವುಗಳೆಲ್ಲವನ್ನು ಎದುರಿಸಲು ಸನ್ನದ್ಧರಾಗಬೇಕು ಕೇವಲ ಕೃಷಿ ಕಾಯಕದಲ್ಲಿ ತೊಡಗಿಕೊಳ್ಳದೆ ಕಚ್ಚಾ ಉತ್ಪನ್ನಗಳಿಂದ ವಸ್ತುಗಳನ್ನು ತಯಾರಿಸಲು ಸಣ್ಣ-ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸುವುದರ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ಅಗತ್ಯವಿದೆ ಎಂದರು.
ರಾಯಚೂರು ಪಂಚಮಸಾಲಿ ಮೀಸಲಾತಿ ಸಮಾವೇಶ: ಭಾಷಣದುದ್ದಕ್ಕೂ ಬಿಎಸ್‌ವೈ, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್!
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಂಡವಾಳ ಶಾಹಿಪರ ಆಡಳಿತ ನಡೆಸುತ್ತಿದ್ದು, ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಮುಂಚೆಗಿಂತಲೂ ಸಹ ಕೃಷಿ ಕ್ಷೇತ್ರ ಬಿಕ್ಕಟ್ಟು ಇನ್ನಷ್ಟು ಜಟಿಲಗೊಳ್ಳುತ್ತಿದ್ದು, ಇದರ ಜೊತೆಗೆ ಹವಾಮಾನ ವೈಪರಿತ್ಯವೂ ಸಹ ಬಹುದೊಡ್ಡ ಸವಾಲಾಗಿ ಮಾರ್ಪಟ್ಟಿದೆ.
ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುವುದರ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಈ ನಿಟ್ಟಿನಲ್ಲಿ ರೈತರು ಸಂಘಟಿತರಾಗಿ ಹೋರಾಟದ ಮೂಲಕ ಸಮಸ್ಯೆಗಳ ವಿರುದ್ಧ ಸೆಣಸಾಡಬೇಕು ಎಂದು ಹೇಳಿದರು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು, ಪ್ರಸ್ತುತ ಕೇಂದ್ರ ಸರ್ಕಾರ ದೊಡ್ಡ ಉದ್ಯಮಿಗಳ ಸಾಲ ಮನ್ನಾ ಮಾಡಿದೆ. ಆದರೆ ರೈತರ ಸಾಲಮನ್ನಾ ಮಾಡಿಲ್ಲ. ಯುಪಿಎ ಸರ್ಕಾರ 72 ಸಾವಿರ ಕೋಟಿ ರು. ರೈತರ ಸಾಲಮನ್ನಾ ಮಾಡಿತ್ತು. ರೈತರ ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಟ, ಒತ್ತಡ ಹೇರಬೇಕು. ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಒಂದು ವರ್ಷದ ಕಾಲ ನಡೆದ ಹೋರಾಟಕ್ಕೆ ಮಣಿದು ಪ್ರಧಾನಿ ಮೋದಿ ರೈತರಿಗೆ ತಲೆಬಾಗಿದ್ದು, ಐತಿಹಾಸಿಕ ಸಾಕ್ಷಿಯಾಗಿದೆ ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಮಾಜಿ ಪ್ರಧಾನಿ ಚರಣ್ ಸಿಂಗ್ ಗ್ರಾಮೀಣ ಆರ್ಥಿಕತೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಸಿ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು. ದಿ.ಪುಟ್ಟಣ್ಣಯ್ಯನವರೂ ರೈತ ನಾಯಕರಾಗಿ ಹೋರಾಡುವುದರ ಜೊತೆಗೆ ಶಾಸಕರಾಗಿ ಸದನದಲ್ಲಿ ರೈತರ, ಕೃಷಿ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದರು. ಇಬ್ಬರು ಮಹಾನ್ ನಾಯಕರು ಅವರ ಸ್ಮರಣೆ ಅಗತ್ಯವಾಗಿದೆ ಎಂದರು.
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಂಚಮಸಾಲಿ 2ಎ ಮೀಸಲಾತಿ: ಸರ್ಕಾರಕ್ಕೆ ಸಂಕ್ರಾಂತಿವರೆಗೆ ಗಡುವು ನೀಡಿದ ಜಯಮೃತ್ಯುಂಜಯಶ್ರೀ
ಸರ್ವೋದಯ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಜೆ.ಎಂ ವೀರಸಂಗಯ್ಯ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಇದ್ದರು.
ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ ಸ್ವಾಗತಿಸಿದರು. ರವಿಕಿರಣ ಪುಣಚ ನಿರೂಪಿಸಿದರು.
ಸರ್ಕಾರಕ್ಕೆ ಹಕ್ಕೋತ್ತಾಯಿಸಿ ಮನವಿ: ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಮಟ್ಟದ ಸಮಾವೇಶದಲ್ಲಿ ತೆಗೆದುಕೊಂಡು ಹಕ್ಕೋತ್ತಾಯಗಳನ್ನು ರಾಜ್ಯ ಸರ್ಕಾರ ಪರಿಗಣಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘದ ಮುಖಂಡರು ಸಚಿವ ಬೋಸರಾಜು ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.