ಹಕ್ಕಿಜ್ವರದ ಅಪಪ್ರಚಾರಕ್ಕೆ ಕಿವಿಗೊಡದಿರಿ: ಬಿ.ಸಿ. ಪಾಟೀಲ್| ಕಲ್ಲಂಗಡಿ ಸೇವನೆ ಆರೋಗ್ಯಕ್ಕೆ ಒಳ್ಳೆಯದು| ಕೋಳಿ ಮಾಂಸ, ಮೀನು ಸೇವನೆಯಿಂದಲೂ ಯಾವುದೇ ಸಮಸ್ಯೆ ಇರುವುದಿಲ್ಲ| ಕೂಡ ಕೃಷಿ ಚಟುವಟಿಕೆ ಕೈಗೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು|
ಯಾದಗಿರಿ(ಏ.09): ಕಲ್ಲಂಗಡಿ ಹಣ್ಣಿನ ಕುರಿತು ಮತ್ತು ಹಕ್ಕಿಜ್ವರದ ಅಪಪ್ರಚಾರದಿಂದಾಗಿ ಕಲ್ಲಂಗಡಿ ಹಣ್ಣು ಮತ್ತು ಕೋಳಿ ಸಾಕಾಣಿಕೆ ಮತ್ತು ಮಾರಾಟಕ್ಕೆ ಅಡ್ಡಿಯಾಗಿದ್ದು, ಜನರು ವದಂತಿಗಳಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಲ್ಲಂಗಡಿ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ಅದರಂತೆ ಕೋಳಿ ಮಾಂಸ, ಮೀನು ಸೇವನೆಯಿಂದಲೂ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
undefined
ಪ್ರಾಣವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ: ಆಶಾ ಕಾರ್ಯಕರ್ತೆಯರಿಗೆ ಹೂಮಳೆ ಸ್ವಾಗತ
ಸಾಮಾಜಿಕ ಅಂತರ, ಮುಂಜಾಗ್ರತೆ ಅನಿವಾರ್ಯ:
ರಾಜ್ಯದ ರೈತರ ಹಿತ ಕಾಪಾಡುವುದು ಹಾಗೂ ಬೆಳೆಗಳಿಗೆ ಮುಕ್ತ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಸದ್ಯಕ್ಕೆ ಕೊರೋನಾ ನಿಯಂತ್ರಣ ಮತ್ತು ನಿವಾರಣೆಗೆ ಹೆಚ್ಚಿನ ಗಮನ ನೀಡುತ್ತಿದ್ದು, ಹಠಾತ್ತಾಗಿ ಬಂದಿರುವಂತಹ ಈ ಪರಿಸ್ಥಿತಿ ಇಡೀ ವಿಶ್ವವನ್ನು ತಲ್ಲಣಗೊಳಿಸಿದೆ. ಕಾರಣ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ. ರೈತರು ಕೂಡ ಕೃಷಿ ಚಟುವಟಿಕೆ ಕೈಗೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಲ್ಲದೆ, ಸರ್ಕಾರ ಸೂಚಿಸಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಮನವಿ ಮಾಡಿದರು.
ಬೀಜ, ರಸಗೊಬ್ಬರ ಪೂರೈಕೆಗೆ ಸರ್ಕಾರ ಸನ್ನದ್ಧ:
ಮುಂಗಾರು ಬಿತ್ತನೆಗಾಗಿ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಸರ್ಕಾರ ಸನ್ನದ್ಧವಾಗಿದೆ. ಜಿಲ್ಲೆಯ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ ಸಚಿವ ಪಾಟೀಲ್, ಎಪಿಎಂಸಿ ಎಂದಿನಂತೆ ಕಾರ್ಯನಿರ್ವಹಿಸಬೇಕು. ಹಮಾಲರಿಗೆ ಪಾಸ್ ವಿತರಿಸಬೇಕು. ಇನ್ನು ತರಕಾರಿ, ಹಣ್ಣು-ಹಂಪಲುಗಳಿಗೆ ಮಾರುಕಟ್ಟೆ ಒದಗಿಸಲು ತೋಟಗಾರಿಕೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರಿಂದ ದೂರುಗಳು ಬರುವ ಮುನ್ನವೇ ಅವರ ಸಮಸ್ಯೆಗಳನ್ನು ಅರಿತು ಅಧಿಕಾರಿಗಳು ಕೆಲಸ ಮಾಡಬೇಕು. ನಿರ್ಲಕ್ಷ್ಯ ವಹಿಸುವವರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಎಚ್ಚರಿಕೆ ನೀಡಿದರು.