ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸುರವರು ಪರಿವರ್ತನೆಯ ಹರಿಕಾರರು, ಧೀಮಂತ ನಾಯಕ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಹೇಳಿದರು.
ಚಿಕ್ಕಮಗಳೂರು (ಆ.21): ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸುರವರು ಪರಿವರ್ತನೆಯ ಹರಿಕಾರರು, ಧೀಮಂತ ನಾಯಕ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಮಾಜಿ ಮುಖ್ಯಮಂತ್ರಿಡಿ.ದೇವರಾಜ ಅರಸುರವರ 107ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
2 ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯದಲ್ಲಿ ಸುಧಾರಣೆ ತಂದಿದ್ದಾರೆ. ಸರ್ಕಾರ ಸುತ್ತೋಲೆ ಹೊರಡಿಸಿ ಪ್ರತಿ ಜಿಲ್ಲೆಯಲ್ಲೂ ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆಯನ್ನು ಆಚರಿಸಲು ಸೂಚಿಸಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಟಿ.ರವಿ ಮಾತನಾಡಿ, ದೇವರಾಜ ಅರಸು ರಾಜಕೀಯ ಪ್ರಯೋಗದಲ್ಲಿ ಯಶಸ್ಸು ಕಂಡವರು. ನಾಲ್ವಡಿ ಕೃಷ್ಣರಾಜ ಒಡೆಯರ್ ವಸತಿ ಶಾಲೆಗಳನ್ನು ಆರಂಭಿಸಿದರೆ ಅದನ್ನು ವ್ಯಾಪಕಗೊಳಿಸಿದವರು ದೇವರಾಜ ಅರಸು ಎಂದು ಹೇಳಿದರು.
ಬಿಜೆಪಿಗೆ ಸಮಾನತೆ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಲ್ಲ: ಸಿದ್ದರಾಮಯ್ಯ
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ದೇವರಾಜ ಅರಸು ಸಮಾಜದ ಹಾಗೂ ಎಲ್ಲರ ನಾಯಕನಾಗಿದ್ದು, ಅವರನ್ನು ಕೇವಲ ಹಿಂದುಳಿದ ವರ್ಗಗಳಿಗೆ ಸೀಮಿತಗೊಳಿಸಬಾರದು ಎಂದರು. ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಭೂಸುಧಾರಣೆ, ಉಳುವವನೆ ಭೂಮಿಯ ಒಡೆಯ, ಕೃಷಿ ಬ್ಯಾಂಕ್ ಸ್ಥಾಪನೆ, ವೃದ್ಧಾಪ್ಯ ವೇತನ, ವಿಧವಾ ವೇತನ, ವಿಶೇಷ ಚೇತನರಿಗೆ ಸಹಾಯಧನ, ಕೃಷಿ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮತ್ತು ಜೀತ ಪದ್ಧತಿ ಮುಕ್ತಿಯಂತಹ ಸುಧಾರಣೆಗಳನ್ನು ಕೈಗೊಂಡ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಶಾಸಕ ಎಂ.ಪಿ.ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್ ಮತ್ತು ಜಿಲ್ಲಾ ಅರಸು ಸಂಘದ ಅಧ್ಯಕ್ಷ ಮಧುಕುಮಾರ್‌ರಾಜ್ ಅರಸ್ ಉಪಸ್ಥಿತರಿದ್ದರು.
Chikkamagaluru: ಕಾಫಿನಾಡಿನ ಗಿರಿ ಶ್ರೇಣಿಯಲ್ಲಿ ರಾರಾಜಿಸುತ್ತಿವೆ ಕುರಂಜಿ ಹೂ ಸೌಂದರ್ಯ
ಕಾರ್ಯಕ್ರಮದಲ್ಲಿ ಕೆ.ಪುಷ್ಪಾಂಜಲಿ ಅವರಿಗೆ 2022-23ನೇ ಸಾಲಿನ ದೇವರಾಜ ಅರಸು ಜಿಲ್ಲಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಾಹಿತಿ ಚಟ್ನಳ್ಳಿ ಮಹೇಶ್ ಉಪನ್ಯಾಸ ನೀಡಿದರು. ಮಲ್ಲಿಗೆ ಸುಧೀರ್ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋಮಶೇಖರ್ ಸ್ವಾಗತಿಸಿದರು.