ಸೆರೆ ಹಿಡಿದಿದ್ದ ಕುಶ ಆನೆಯನ್ನು ಮತ್ತೆ ಕಾಡಿಗೆ ಬಿಡುವಂತೆ ಸೂಚಿಸಲಾಗಿದೆ. ಕುಶ ಆನೆಗೆ ಹಿಂಸೆ ನೀಡಲಾಗುತ್ತಿದೆ ಎನ್ನುವ ಆರೋಪ ಹಿನ್ನೆಲೆ ಈ ಆದೇಶ ನೀಡಲಾಗಿದೆ.
ಬೆಂಗಳೂರು (ಏ.29) : ಅರಣ್ಯ ಇಲಾಖೆ ಸೆರೆ ಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಆರಣ್ಯ ಸಚಿವ ಅರವಿಂದ ಲಿಂಬಾವಳಿ ಸೂಚಿಸಿದ್ದಾರೆ. ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶನನ್ನು ಇತ್ತೀಚೆಗೆ ಸೆರೆ ಹಿಡಿದು ತರಲಾಗಿತ್ತು.
ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ‘ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ, ಆನೆ ಆರೋಗ್ಯವಾಗಿದೆ’ ಎಂದು ಮಾಹಿತಿ ನೀಡಿದರು.
ದುಬಾರೆ ಶಿಬಿರದಿಂದ ತಪ್ಪಿಸಿಕೊಂಡಿದ್ದ ಆನೆ 2 ವರ್ಷದ ಬಳಿಕ ಸೆರೆ ..
ಅಧಿಕಾರಿಗಳ ಅಭಿಪ್ರಾಯ ಪಡೆದ ಬಳಿಕ ಸಚಿವರು, ‘ಆನೆಗೆ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಿ ಬಿಡುಗಡೆಗೆ ಸೂಕ್ತ ಸ್ಥಳ ನಿಗದಿಪಡಿಸಿದ ಬಳಿಕ ಎಲ್ಲಾ ಮುಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದರು.
ಇದೇ ವೇಳೆ ದುಬಾರೆ ಸಮೀಪ ಪ್ರಜ್ಞಾ ಚೌಟ ಎನ್ನುವವರು ಆನೆಗಳನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚಿಸಲಾಯಿತು. ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಮಾಲೊಚನೆ ನಡೆಸಲಾಯಿತು.