* ಈ ಬಗ್ಗೆ ಈವರೆಗೆ ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ
* ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಜೊತೆ ಚರ್ಚೆ ನಡೆಯುತ್ತಿದೆ
* ಗೋಮಾಳ ಒತ್ತುವರಿ ತೆರವು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ
ಶಿವಮೊಗ್ಗ(ಜು.17): ಗೋಹತ್ಯೆ ನಿಷೇಧ ಜಾರಿಗೆ ಒತ್ತಾಯಿಸಿ ಮತ್ತು ಅಕ್ರಮ ಗೋ ಸಾಗಣೆ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧ ದಾಖಲಾಗಿರುವ ಕೇಸುಗಳನ್ನು ಹಿಂಪಡೆಯುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆ ನಡೆಯುತ್ತಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಗ್ಗೆ ಈವರೆಗೆ ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಜೊತೆ ಚರ್ಚೆ ನಡೆಯುತ್ತಿದೆ ಎಂದರು.
ಗೋಮಾಳ ಒತ್ತುವರಿ ತೆರವು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಒಂದು ಸರ್ಕಾರಿ ಗೋ ಶಾಲೆ ಆರಂಭಿಸಲಾಗುವುದು. ಎಲ್ಲ ಜಿಲ್ಲಾಧಿಕಾರಿಗಳಿಗೂ ಜಾಗ ಗುರುತಿಸುವಂತೆ ಸೂಚನೆ ನೀಡಲಾಗಿದ್ದು, ಸೆ.2ರ ಗಡುವು ನೀಡಲಾಗಿದೆ. ಮುಖ್ಯಮಂತ್ರಿ ತವರು ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಬೇಗ ಜಾಗ ನೀಡಿದರೆ ಇಲ್ಲೇ ಮೊದಲ ಸರ್ಕಾರಿ ಗೆ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.