
ಬೆಳಗಾವಿ: ಬೆಳಗಾವಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹದಿನೈದಕ್ಕೂ ಹೆಚ್ಚು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿ ಒಂದೇ ಸಮಯದಲ್ಲಿ ಚಾಲನೆ ನೀಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದರೂ ಕಾರ್ಯಾರಂಭವಾಗುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಂದು ಬಜೆಟ್‌ನಲ್ಲಿ ಯೋಜನೆ ಘೋಷಿಸಿದರೇ ಮುಂದಿನ ಬಜೆಟ್‌ನಲ್ಲಿ ಅನುದಾನ ಬಿಡುಗಡೆಗೊಳ್ಳುವ ವ್ಯವಸ್ಥೆ ಇದೆ. ಈ ವ್ಯವಸ್ಥೆಯಿದ್ದಾಗ ನಮ್ಮಿಂದ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣಕ್ಕೆ ₹75 ಕೋಟಿ, ಪತ್ರಿಕಾ ಭವನಕ್ಕೆ ₹10 ಕೋಟಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ₹215 ಕೋಟಿ, ಹುದಲಿ ಆರ್‌ಒಬಿಗೆ ₹35 ಕೋಟಿ, ಗೋಕಾಕಿನ ಲೋಳಸೂರು ಸೇತುವೆಗೆ ₹40 ಕೋಟಿ ಸೇರಿದಂತೆ ಹಲವು ಯೋಜನೆಗಳಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಮಾರ್ಚ್ ತಿಂಗಳೊಳಗೆ ಕಾಮಗಾರಿಗಳು ಆರಂಭವಾಗಲಿವೆ ಎಂದರು.
ಕಳೆದ 10 ವರ್ಷಗಳಿಂದ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಹೊಸ ಸೇತುವೆಗಳ ನಿರ್ಮಾಣವಾಗಿಲ್ಲ. ಈ ಹಿನ್ನೆಲೆಯಲ್ಲಿ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಖಾನಾಪುರ ತಾಲೂಕಿನಲ್ಲಿ ಮೂರು, ಕಾಗವಾಡ ತಾಲೂಕಿನಲ್ಲಿ ಒಂದು ಹಾಗೂ ನಿಪ್ಪಾಣಿ ತಾಲೂಕಿನಲ್ಲಿ ಎರಡು ದೊಡ್ಡ ಸೇತುವೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.
ತಾವು ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿದ 48 ಕಾಮಗಾರಿಗಳು ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದವು. ಅವುಗಳಲ್ಲಿ 39 ರಸ್ತೆ ಅಭಿವೃದ್ಧಿ ಯೋಜನೆಗಳ ಸಮಸ್ಯೆಗಳನ್ನು ಈಗಾಗಲೇ ಪರಿಹರಿಸಲಾಗಿದೆ. ಉಳಿದ 3 ಕಾಮಗಾರಿಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ ಎಂದು ತಿಳಿಸಿದರು.
ಈ ಎಲ್ಲ ವಿಚಾರಗಳನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತಂದಿದ್ದು, ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಯೋಜನೆಗಳು ಹಾಗೂ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.