ನಾಗಮಂಗಲ (ಮಾ.17): ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದೊರಕುವ ಸೇವೆಗಳನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಕದಬಹಳ್ಳಿಯಲ್ಲಿ 2.54 ಕೋಟಿ ರು. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದರು.
ನಾನು ಶಾಸಕ, ಸಚಿವನಾಗಿದ್ದ ಅವಧಿಯಲ್ಲಿ ತಾಲೂಕಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳ ಆಸ್ಪತ್ರೆಯನ್ನಾಗಿಸಿ ಮೇಲ್ದರ್ಜೆಗೇರಿಸುವ ಜೊತೆಗೆ ತಾಲೂಕಿನ ಹಲವು ಗ್ರಾಮಗಳಿಗೆ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ ಎಂದರು. ಕದಬಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಹೊರ ಮತ್ತು ಒಳರೋಗಿಗಳ ಕೊಠಡಿ, ಎಕ್ಸರೇ, ಪ್ರಯೋಗಾಲಯ, ವೈದ್ಯರ ಕೊಠಡಿ, ಶೌಚಾಲಯ ಸೇರಿದಂತೆ ಸುಸಜ್ಜಿತವಾದ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಿಸಲಾಗುತ್ತಿದೆ. ಇದರಿಂದಾಗಿ ತಾಲೂಕಿನ ಗಡಿ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.
ಅಧಿಕಾರ ಯಾರಿಗೂ ಶಾಶ್ವತವಲ್ಲ. ಶಾಸಕನಾಗಿರಲ, ಸಚಿವನಾಗಿರಲಿ ಸಿಕ್ಕ ಅವಕಾಶದಲ್ಲಿ ಶಾಶ್ವತವಾಗಿ ಉಳಿಯುವಂತಹ ಅಭಿವೃದ್ಧಿ ಕೆಲಸ ಮಾಡಿ ಜನರ ಋಣ ತೀರಿಸಬೇಕೆಂಬುದು ನನ್ನ ಮುಖ್ಯ ಉದ್ದೇಶ. ಅದಕ್ಕಾಗಿ ತಾಲೂಕಿನ ಜನರ ನಿರೀಕ್ಷೆಗೂ ಮೀರಿ ಜನ ಜಾನುವಾರುಗಳ ಆರೋಗ್ಯ ಕೇಂದ್ರಗಳು, ಶಾಲಾ ಕಾಲೇಜು, ಅಂಗನವಾಡಿ ಕೇಂದ್ರ, ವಿವಿಧ ವಸತಿ ಶಾಲೆಗಳು, ಹಾಸ್ಟೆಲ್‌ಗಳು, ವಿದ್ಯುತ್ ವಿತರಣಾ ಕೇಂದ್ರಗಳು, ಕೆರೆ ತುಂಬಿಸುವ ಯೋಜನೆ ತಂದಿದ್ದೇನೆ. ಅಲ್ಲದೇ, ರಸ್ತೆ, ಚರಂಡಿ, ಸೇತುವೆ ನಿರ್ಮಾಣಕ್ಕೆ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಜನರು ಇದನ್ನು ಅರ್ಥೈಸಿಕೊಳ್ಳಬೇಕು ಎಂದರು.
ಇದಕ್ಕೂ ಮುನ್ನ ತಾಲೂಕಿನ ಕಳ್ಳಿಗುಂದಿ ಗ್ರಾಮದಲ್ಲಿ 1 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವರು, ಸುಖಧರೆ ಗ್ರಾಮದಲ್ಲಿ ಮಾದರಿ ಗ್ರಾಮ ಯೋಜನೆಗೆ ಚಾಲನೆ ನೀಡಿ, ತಟ್ಟೇಕೆರೆ ಗ್ರಾಮದಲ್ಲಿ ಪಶು ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದರು. ಚಟ್ಟೇನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ಟಿಎಪಿಸಿಎಂಎಸ್ ನಿರ್ದೇಶಕ ಎನ್.ಟಿ.ಕೃಷ್ಣಮೂರ್ತಿ, ಸುಕೃತ ಬಿಲ್ಡರ್‍ಸ್‌ನ ಶಿವಶಂಕರ್, ಮುಖಂಡರಾದ ಮಂಜೇಶ್, ದೊರೆಸ್ವಾಮಿ ಸೇರಿದಂತೆ ಹಲವರು ಇದ್ದರು.