ಬರ ನಿರ್ವಹಣೆಗೆ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತರುವಲ್ಲಿ ಲೋಪವಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಸಿದರು.
ಹುಕ್ಕೇರಿ (ನ.29): ಬರ ನಿರ್ವಹಣೆಗೆ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತರುವಲ್ಲಿ ಲೋಪವಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಸಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಮಂಗಳವಾರ ನಡೆದ ಬರ ನಿರ್ವಹಣೆ ಮತ್ತು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಹಸೀಲ್ದಾರ್ ಹಾಗೂ ನೊಡೆಲ್ ಅಧಿಕಾರಿಗಳು ಕೆಳ ಹಂತದ ಅಧಿಕಾರಿಗಳಿಂದ ಕೆಲಸ ತೆಗೆದುಕೊಳ್ಳಬೇಕು. ಈ ಕರ್ತವ್ಯದಲ್ಲಿ ಉದಾಸೀನತೆ ತೋರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಾಕೀತು ಮಾಡಿದರು.
ಸರ್ಕಾರ ಬರವನ್ನು ಗಂಭೀರವಾಗಿ ಪರಿಗಣಿಸಿದ್ದು, ಬರ ಪರಿಹಾರಕ್ಕೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ. ಅಗತ್ಯ ಕೆಲಸಗಳಿಗೆ ಕೋರಿಕೆ ಸಲ್ಲಿಸಿದ ಕೂಡಲೇ ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡುತ್ತಾರೆ. ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳ ಕಾರ್ಯವೈಖರಿ ಮೇಲೆ ನಿಗಾ ವಹಿಸಬೇಕು ಎಂದವರು ಸೂಚಿಸಿದರು.
ಜನ ಮತ್ತು ಜಾನುವಾರುಗಳ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಜಾನುವಾರುಗಳ ವಿಮೆ ಅವೈಜ್ಞಾನಿಕವಾಗಿದ್ದು, ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳು ಕೇಂದ್ರ ಸ್ಥಾನದಲ್ಲಿದ್ದು, ಬರ ಪರಿಸ್ಥಿತಿಯನ್ನು ಪರಿಣಾಮಕಾರಿ ಎದುರಿಸಬೇಕು ಎಂದು ಅವರು ಆದೇಶಿಸಿದರು.
ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಬೇಡ: ಸಚಿವ ಕೃಷ್ಣ ಭೈರೇಗೌಡ
ಉದ್ಯೋಗ ಖಾತ್ರಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. 15ನೇ ಹಣಕಾಸು ಯೋಜನೆಯಡಿ ಸೇರಿದಂತೆ ವಿವಿಧ ಅನುದಾನದಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಈ ಮೂಲಕ ಯಾವುದೇ ಅನುದಾನ ಸರ್ಕಾರಕ್ಕೆ ಮರಳಿ ಹೋಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು. ಉಪವಿಭಾಗಾಧಿಕಾರಿ ಶ್ರವಣ ನಾಯಿಕ, ತಾಪಂ ಆಡಳಿತಾಧಿಕಾರಿಯೂ ಆದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ, ತಹಸೀಲ್ದಾರ್ ಮಂಜುಳಾ ನಾಯಕ ಮತ್ತಿತರರು ಉಪಸ್ಥಿತರಿದ್ದರು.