ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದೀಗ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಂಗಳೂರು [ಸೆ.09]: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮೂರು ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಈ ಆರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮಹಾರಾಷ್ಟ್ರದಿಂದ ಕೇರಳದ ನಡುವೆ ಗಾಳಿಯ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮತ್ತೆ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಸೆ.9ರ ಸೋಮವಾರ ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆ, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ 115 ರಿಂದ 205 ಮಿ.ಮೀ. ಮಳೆಯಾಗುವ ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನ ಹಾಸನ, ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಸೋಮವಾರ 65 ರಿಂದ 115 ಮಿ.ಮೀ. ಮಳೆಯಾಗುವ ಲಕ್ಷಣ ಇರುವುದರಿಂದ ‘ಯಲ್ಲೋ ಅಲರ್ಟ್’ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅತಿ ಹೆಚ್ಚು ಮಳೆ ಎಲ್ಲೆಲ್ಲಿ: ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಉಡುಪಿಯ ಸಿದ್ದಾಪುರ ಹಾಗೂ ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಅತಿ ಹೆಚ್ಚು 14 ಸೆಂ.ಮೀ ಮಳೆಯಾದ ವರದಿಯಾಗಿದೆ. ಉಳಿದಂತೆ ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 13, ಬೆಳಗಾವಿಯ ಲೋಂಡಾದಲ್ಲಿ 12, ಉಡುಪಿಯ ಕೊಲ್ಲೂರು, ಶಿವಮೊಗ್ಗದ ಆಗುಂಬೆಯಲ್ಲಿ 11, ಚಿಕ್ಕಮಗಳೂರಿನ ಕಮ್ಮರಡಿಯಲ್ಲಿ 10, ಉಡುಪಿಯ ಕುಂದಾಪುರ, ದಕ್ಷಿಣ ಕನ್ನಡದ ಭಟ್ಕಳ, ಶಿವಮೊಗ್ಗದ ಹೊಸನಗರದಲ್ಲಿ ತಲಾ 9 ಸೆಂ.ಮೀ. ಮಳೆಯಾದ ವರದಿಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.