ಕೊರೋನಾ ಪ್ರಕರಣ ಮತ್ತಷ್ಟು ಹೆಚ್ಚಾಗುವ ಆತಂಕ| ಹಿರೇಕೆರೂರು ಡಿಪೋದಿಂದ ರಾಣಿಬೆನ್ನೂರಿಗೆ ಸಂಚರಿಸುವ ಬಸ್‌ಗಳಲ್ಲಿ ಪಾಲನೆಯಾಗದ ಸಾಮಾಜಿಕ ಅಂತರ| ಬಸ್‌ನಲ್ಲಿ ಸುಮಾರು 60 ರಿಂದ 70 ಜನರ ಪ್ರಯಾಣ| ಅಧಿಕಾರಿಗಳು ಎತ್ತೆಚ್ಚುಕೊಳ್ಳುವ ಮೂಲಕ ಪ್ರಯಾಣಿಕರ ಸಂಖ್ಯೆ ಮಿತಿಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು|
ಹಿರೇಕೆರೂರು(ಜೂ. 27): ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಸರ್ಕಾರದ ನಿಯಮಗಳನ್ನು ಪಾಲಿಸದೇ ಅಧಿಕಾರಿಗಳು ಬಸ್‌ನಲ್ಲಿ ಹೆಚ್ಚಿನ ಪ್ರಯಾಣಿಕರಿಗೆ ಅವಕಾಶ ನೀಡುತ್ತಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಚರಿಸುವ ಬಸ್‌ಗಳಲ್ಲಿ ಪ್ರಯಾಣಿಕರ ನಡುವೆ ಸಾಮಾಜಿಕ ಅಂತರ ಮರೀಚಿಕೆಯಾಗಿದ್ದು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಮೂಲಕ ಸರ್ಕಾರದ ಆದೇಶವನ್ನು ನಿರ್ಲಕ್ಷಿಸುತ್ತಿರುವುದು ಕಂಡುಬರುತ್ತಿದೆ.
ಹಾವೇರಿ: ಜುಲೈನಲ್ಲಿ ಕೊರೋನಾ ಸ್ಫೋಟ, 3 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಕೇಸ್!
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ವೈರಸ್ ಮಟ್ಟಹಾಕುಲು ಸರ್ಕಾರ ಸೂಕ್ತ ನಿರ್ದೇಶನಗಳನ್ನು ನೀಡಿ ಬಸ್ ಸಂಚಾರಕ್ಕೆ ಅವಕಾಶ ನೀಡಿದೆ. ಆದರೆ ಅಧಿಕಾರಿಗಳು ಮಾತ್ರ ಯಾವುದೇ ನಿಯಮ ಪಾಲಿಸದೇ ಪ್ರಯಾಣಿಕರ ಸುರಕ್ಷತೆಯನ್ನು ಗಮನಿಸದೇ ಮನಸ್ಸಿಗೆ ಬಂದಂತೆ ಪ್ರಯಾಣಕ್ಕೆ ಅವಕಾಶ ನೀಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಲಾಕ್‌ಡೌನ್ ತೆರವುಗೊಳಿಸಿದ ನಂತರ ಬಸ್ ಪ್ರಯಾಣಿಕರಿಗೆ ಮಿತಿ ಹೇರುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್‌ಗಳಲ್ಲಿ ಈ ನಿಯಮ ಗಾಳಿಗೆ ತೂರಿದ್ದು, ಬಸ್‌ನಲ್ಲಿ ಪ್ರಯಾಣಿಕರು ನಿಂತುಕೊಂಡು ಸಂಚರಿಸುವ ಮಟ್ಟದಲ್ಲಿ ಪ್ರಯಾಣಕ್ಕೆ ಬಸ್ ಡಿಪೋದ ಅಧಿಕಾರಿಗಳು ಅವಕಾಶ ನೀಡಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಹಿರೇಕೆರೂರು ಡಿಪೋದಿಂದ ರಾಣಿಬೆನ್ನೂರಿಗೆ ಸಂಚರಿಸುವ ಬಸ್‌ಗಲ್ಲಿ ನಿಯಮ ಪಾಲನೆಯಾಗುತ್ತಿಲ್ಲ. ಬಸ್‌ನಲ್ಲಿ ಸುಮಾರು 60ರಿಂದ 70 ಜನರು ಪ್ರಯಾಣಿಸುತ್ತಿದ್ದು, ಯಾವುದೇ ಸುರಕ್ಷತಾ ಕ್ರಮ ಹಾಗೂ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ. ಇದರಿಂದಾಗಿ ಮತ್ತಷ್ಟು ಕೊರೋನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಅಧಿಕಾರಿಗಳು ಎತ್ತೆಚ್ಚುಕೊಳ್ಳುವ ಮೂಲಕ ಪ್ರಯಾಣಿಕರ ಸಂಖ್ಯೆ ಮಿತಿಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.