ಮೈಸೂರಿನಲ್ಲಿ ಇ-ಆಸ್ತಿ ತೆರಿಗೆ ವೆಬ್ ಸೈಟ್ ಲೋಕಾರ್ಪಣೆ

By Suvarna NewsFirst Published Jul 17, 2021, 5:40 PM IST
Highlights

* ಮೈಸೂರಿನಲ್ಲಿ ಇ-ಆಸ್ತಿ ತೆರಿಗೆ ವೆಬ್ ಸೈಟ್ ಲೋಕಾರ್ಪಣೆ
 * ಉಸ್ತುವಾರಿ ಸಚಿವ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಉದ್ಘಾಟನೆ
* ಇ-ತೆರಿಗೆ  ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದ ಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು 
 

ಮೈಸೂರು, (ಜುಲೈ.17): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಶನಿವಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ  ಸಾರ್ವಜನಿಕರ ಅನುಕೂಲಕ್ಕಾಗಿ ರೂಪುಗೊಂಡಿದ್ದ ಇ-ಆಸ್ತಿ ತೆರಿಗೆ ವೆಬ್ ಸೈಟ್ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವಂತಹ ಸಾರ್ವಜನಿಕರು ನಗರಾಭಿವೃದ್ಧಿ ಪ್ರಾಧಿಕಾರ ವೆಬ್ ಸೈಟ್  http://www.mudamysuru.co.in ಮೂಲಕ ಇ-ತೆರಿಗೆ  ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮೈಸೂರು  ಅಭಿವೃದ್ಧಿಗಾಗಿ ಎಲ್ಲ ಪಕ್ಷದವರು ಪಕ್ಷಾತೀತವಾಗಿ ಒಗ್ಗಟ್ಟಾಗಿ ನಿಂತು ಕಾರ್ಯನಿರ್ವಹಿಸುತ್ತಿದ್ದಾರೆ. ನಗರದ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಇಂದು ಹೊಸ ಹೊಸ ಹೆಜ್ಜೆಗಳನ್ನು ಇಡುತ್ತಿರುವುದು ಬಹಳ ಸಂತೋಷದ ವಿಚಾರವಾಗಿದೆ. ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆ, ಚರಂಡಿ, ಒಳಚರಂಡಿ ಹಾಗೂ ಉದ್ಯಾನವನದ ಕಡೆ ಗಮನ ಹರಿಸಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಮುಡಾ ಅಧ್ಯಕ್ಷ ರಾಜೀವ್ ಮಾತನಾಡಿ, ಆನ್‌ಲೈನ್ ಟ್ಯಾಕ್ಸ್ ಅನ್ನು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಳವಡಿಸಿಕೊಳ್ಳಲು ಚಿಂತಿಸಿದಾಗ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂತಹ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಯಾವುದೇ ಸಂಘ, ಸಂಸ್ಥೆ ಹಾಗೂ ಪ್ರಾಧಿಕಾರಗಳು ಮುಂಚೂಣಿಯಲ್ಲಿರಬೇಕು ಎಂದು ಸಲಹೆ ನೀಡಿದ್ದರು ಎಂದು ಹೇಳಿದರು.

ಈ ತಂತ್ರಜ್ಞಾನದ ಮೂಲಕ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ತಂತ್ರಜ್ಞಾನದ ಸಹಾಯದಿಂದ ಮನೆಯಲ್ಲೆ ಕುಳಿತು ಟ್ಯಾಕ್ಸ್ ಕಟ್ಟಬಹುದಾಗಿದೆ ವಿವರಿಸಿದರು.

ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ಧನ್, ಜೆ.ಎಲ್.ಆರ್. ಅಧ್ಯಕ್ಷ ಅಪ್ಪಣ್ಣ, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮಹಾನಗರ ಪಾಲಿಕೆಯ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಡಿ.ಬಿ.ನಟೇಶ್, ಸೇರಿದಂತೆ ಇತರರು ಹಾಜರಿದ್ದರು.

click me!