
ಬೆಂಗಳೂರು (ಜ.24): ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ಕಂದಾಯ ಸಚಿವ ಆರ್. ಅಶೋಕ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹಿಂದೆ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಈಗ ಚುನಾವಣೆ ಇನ್ನು ಎರಡು ತಿಂಗಳು ಬಾಕಿ ಇರುವಾಗ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆರ್. ಅಶೋಕ್ ಅವರನ್ನು ಮಂಡ್ಯ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನಿಯೋಜನೆ ಮಾಡಲಾಗಿದೆ.
ಚುನಾವಣೆ ಗೆಲ್ಲಲು ತಂತ್ರ:
ಇದು ಮಂಡ್ಯದಲ್ಲಿ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ ಕೆ.ಆರ್.ಪೇಟೆ ಮಾತ್ರ ಬಿಜೆಪಿ ಅಭ್ಯರ್ಥಿ ಕೆ.ಸಿ. ನಾರಾಯಣಗೌಡ (ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ) ಗೆಲುವು ಸಾಧಿಸಿದ್ದಾರೆ. ಉಳಿದಂತೆ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಇದ್ದಾರೆ. ಈಗ ಮಂಡ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಪ್ರಭಲ ಆಕಾಂಕ್ಷೆಯನ್ನು ಹೊಂದಿದ್ದು, ಅದಕ್ಕೆ ಸಿದ್ಧತೆ ಮಾಡಿಕೊಳ್ಳುವ ನಿಟ್ಟಿನಲ್ಲಿಯೇ ಒಕ್ಕಲಿಗ ಸಮುದಾಯದ ಸಚಿವ ಆರ್. ಅಶೋಕ್ ಅವರನ್ನು ಜಿಲ್ಲಾ ಉಸ್ತವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಕೇಳಿಬರುತ್ತಿದೆ.