
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊ*ಲೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಪ್ರಕರಣದ 14ನೇ ಆರೋಪಿ ಪ್ರದೂಷ್ ಎಸ್.ರಾವ್‌ಗೆ ಕ್ಷಮಾದಾನ ನೀಡಿ, 'ಮಾಫಿ ಸಾಕ್ಷಿ' ಯನ್ನಾಗಿ ಪರಿಗಣಿಸಿರುವ ಸೆಷನ್ಸ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ತೂಗುದೀಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ಮಧ್ಯಾಹ್ನಕ್ಕೆ ದರ್ಶನ್ ಅರ್ಜಿ ವಿಚಾರಣೆ ನಿಗದಿಯಾಗಿದೆ.
ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಈ ಅರ್ಜಿಯ ವಿಚಾರಣೆಯನ್ನು ಇಂದೇ ಕೈಗೆತ್ತಿಕೊಳ್ಳಬೇಕೆಂದು ಮನವಿ ಮಾಡಿದರು. ಪ್ರದೂಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಪ್ರಕ್ರಿಯೆಯಲ್ಲಿ ಕಾನೂನಾತ್ಮಕ ಲೋಪಗಳಾಗಿವೆ. ಈ ಕುರಿತು ನ್ಯಾಯಾಲಯದ ಗಮನಕ್ಕೆ ತರುವ ಅಗತ್ಯವಿದೆ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಪ್ರತಿಯನ್ನು ವಿಶೇಷ ಸರ್ಕಾರಿ ಅಭಿಯೋಜಕರಿಗೆ (SPP) ಹಸ್ತಾಂತರಿಸುವಂತೆ ಸೂಚಿಸಿ, ಮಧ್ಯಾಹ್ನವೇ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದರು.
ಇತ್ತ ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಕೊಲೆ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಧೀಶೆ ಸುಜಾತಾ ಅವರು ಮಾಫಿ ಸಾಕ್ಷಿಯಾಗಿರುವ ಪ್ರದೂಷ್‌ಗೆ ಸಮನ್ಸ್ ಜಾರಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರದೂಷ್‌ನನ್ನು ಸೆಪ್ಟೆಂಬರ್ 2 ರಂದು ಖುದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಕುರಿತು ಜೈಲು ಆಡಳಿತಕ್ಕೆ ಮಾಹಿತಿ ನೀಡುವಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾಧಿಕಾರಿಗೆ ಸೂಚಿಸಲಾಗಿದೆ.
ಇದಕ್ಕೂ ಮುನ್ನ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು, ಸೆಷನ್ಸ್ ಕೋರ್ಟ್ ಆಂಗೀಕರಿಸಿರುವ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತಿರುವುದರಿಂದ, ಸೆ.2ರವರೆಗೆ ಪ್ರದೂಷ್ ವಿಚಾರಣೆಯನ್ನು ಮುಂದೂಡಬೇಕೆಂದು ಕೋರಿದ್ದರು. ಆದರೆ ವಾದ-ಪ್ರತಿವಾದ ಆಲಿಸಿದ ಪೀಠವು ಸಾಕ್ಷ್ಯ ದಾಖಲಿಸಲು ಪ್ರದೂಷ್‌ಗೆ ಸಮನ್ಸ್ ಜಾರಿಗೊಳಿಸಿ ಆದೇಶಿಸಿತು.
ಇನ್ನು ಜೈಲಿನಲ್ಲಿರುವ ಪವಿತ್ರಾ ಗೌಡ ಮತ್ತು ನಟ ದರ್ಶನ್ ಸೇರಿದಂತೆ ಪ್ರಮುಖ 6 ಆರೋಪಿಗಳನ್ನು ಸೆಪ್ಟೆಂಬರ್ 2 ರಂದು ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನನ್ನನ್ನು ಕ್ಷಮಿಸಿ ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿ 14ನೇ ಆರೋಪಿಯಾಗಿದ್ದ ಪ್ರದೂಷ್, 2026ರ ಆ.7ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್ (FIR) ರದ್ದುಗೊಳಿಸುವಂತೆ ಕೋರಿ ಪ್ರಕರಣದ ಆರೋಪಿ ಸುಹಾಸ್ ಹಾಗೂ ಇತರರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಈ ಅರ್ಜಿಯ ವಿಚಾರಣೆ ನಡೆದಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದರು.
ವಾದ ಮಂಡಿಸಿದ ವಕೀಲ ಹಷ್ಮತ್ ಪಾಷಾ, "ಪ್ರಕರಣದ ಸಾಕ್ಷಿ ಸಂದೀಪ್ ತನಗೆ ಯಾರೂ ಬೆದರಿಕೆ ಹಾಕಿಲ್ಲ ಎಂದು ಸ್ವತಃ ಹೇಳಿದ್ದಾನೆ. ಆತನಿಗೆ ಆರೋಪಿ ಆಕರ್ಷ್ ಪರಿಚಯವಿದ್ದರೂ, ಆತನಾಗಲಿ ಅಥವಾ ಬೇರೆ ಯಾರೇ ಆಗಲಿ ತನಗೆ ಯಾವುದೇ ರೀತಿಯ ಬೆದರಿಕೆ ಒಡ್ಡಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಅಲ್ಲದೆ, ನಾನು ಯಾರಿಗೂ ಭಯಪಟ್ಟು ಸಾಕ್ಷಿ ನುಡಿದಿಲ್ಲ ಎಂಬುದಾಗಿಯೂ ಸಾಕ್ಷಿಯೇ ತಿಳಿಸಿದ್ದಾನೆ. ಹೀಗಿರುವಾಗ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿರುವುದು ಸರಿಯಲ್ಲ," ಎಂದು ಪೀಠಕ್ಕೆ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರ್ಕಾರಿ ಅಭಿಯೋಜಕ (SPP) ಬಿ.ಎನ್. ಜಗದೀಶ್, ಸಾಕ್ಷಿಯೇ ನೀಡಿದ ಮಾಹಿತಿಯ ಆಧಾರದ ಮೇಲೆ ಹಾಗೂ ಪ್ರಾಥಮಿಕ ತನಿಖೆಯ ನಂತರವೇ ಎಫ್‌ಐಆರ್ ದಾಖಲಿಸಲಾಗಿದೆ. ಈ ವಿಷಯದಲ್ಲಿ ಇನ್ನೂ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಅಲ್ಲದೆ, ಈ ಕುರಿತು ಸಂಪೂರ್ಣ ವಾದವನ್ನು ನಾಳೆ ಮಂಡಿಸುವುದಾಗಿ ಎಸ್ಪಿಪಿ ಬಿ.ಎನ್. ಜಗದೀಶ್ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು, ಸುಹಾಸ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.2ಕ್ಕೆ ಅಂದರೆ ನಾಳೆಗೆ ಮುಂದೂಡಿತು.