ಅಧಿಕ ಭಾರದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಿ| ಅಧಿಕ ಭಾರದ ವಾಹನಗಳ ಸಂಚಾರದಿಂದ ರಸ್ತೆಗಳು ಹಾಳು| ಸೂಕ್ತ ಕ್ರಮಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗೆ ಮನವಿ|
ಚಿಕ್ಕಮಗಳೂರು: (ಸೆ.18): 15 ಮೆಟ್ರಿಕ್ ಟನ್‌ಗಿಂತ ಅಧಿಕ ಭಾರ ಹೊತ್ತು ಜಿಲ್ಲೆಯಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಹಕ್ಕು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆ ಕಾರ್ಯಕರ್ತರ ವೇದಿಕೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಅವರನ್ನು ಭೇಟಿ ಮಾಡಿದ ವೇದಿಕೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
15 ಮೆಟ್ರಿಕ್ ಟನ್‌ಗಿಂತ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ. ರಾಜ್ಯ ಹೈಕೋರ್ಟ್ ಸಹ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಆದೇಶ ನೀಡಿದ್ದರೂ, ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಪ್ರತಿದಿನ ವಾಹನಗಳು ಜಿಲ್ಲೆಯಲ್ಲಿ ಸಂಚರಿಸುತ್ತಿವೆ ಎಂದು ಮನವಿಯಲ್ಲಿ ದೂರಿದ್ದಾರೆ.
ಹೀಗೆ ಅಧಿಕ ಭಾರ ಹೊತ್ತು ಸಾಗುವ ವಾಹನಗಳಿಂದ ಜಿಲ್ಲೆಯ ರಸ್ತೆಗಳು ಸಂಪೂರ್ಣ ಹಾಳಾಗುತ್ತಿರುವುದರಿಂದ ಜನ ಮತ್ತು ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ ಎಂದಿರುವ ಪದಾಧಿಕಾರಿಗಳು ರಾಜ್ಯ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಿ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸದಿದ್ದಲ್ಲಿ ನ್ಯಾಯಾಂಗ ನಿಂದನೆ ಆಗುತ್ತದೆ. ಹೀಗಾಗಿ ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಕ್ಷಣ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಸೆ.27ರಂದು ನಗರದಲ್ಲಿ ರಸ್ತೆ ತಡೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಕರ್ನಾಟಕ ಮಾಹಿತಿ ಹಕ್ಕು ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆ ಕಾರ್ಯಕರ್ತರ ವೇದಿಕೆ ರಾಜ್ಯ ನಿರ್ದೇಶಕ ಸೋಮಾನಾಯಕ್, ಜಿಲ್ಲಾಧ್ಯಕ್ಷ ಪಿ.ಕುಮಾರ್, ತಾಲೂಕು ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯಾಧ್ಯಕ್ಷ ಸುಧೀರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.