
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗಾಗಿ 94 ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ. ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.
ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಲ್ಲಿನ ಜಂಕ್ಷನ್ ರೈಲು ನಿಲ್ದಾಣದಲ್ಲಿ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಮಂಗಳೂರು-ಬೆಂಗಳೂರು ರೈಲು ಮಾರ್ಗ ಕಾಮಗಾರಿ ಅನುಷ್ಠಾನದ ವೇಳೆ ಹಲವು ಸವಾಲುಗಳು ಎದುರಾದರೂ ಎಲ್ಲ ಅಡೆತಡೆಗಳನ್ನು ನಿವಾರಿಸಿ ವಿದ್ಯುದೀಕೃತ ರೈಲು ಸಂಚಾರ ಆರಂಭಿಸಿರುವುದು ಸಂತಸದ ವಿಚಾರ. ಈ ಯೋಜನೆ ಸಾಕಾರಗೊಳಿಸಲು ಶ್ರಮಿಸಿದ ರೈಲ್ವೆ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ಅವರು ಹೇಳಿದರು.
ಮಂಗಳೂರು ರೈಲ್ವೆ ಪ್ರದೇಶ ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಗೆ ಸೇರ್ಪಡೆಯಾಗುವಲ್ಲಿ ನಿರಂತರ ಪ್ರಯತ್ನ ನಡೆಸಿದ ರೈಲ್ವೆ ಅಧಿಕಾರಿ ರಾಜೇಶ್ ಚಂದ್ರ ಅವರ ಕಾರ್ಯವನ್ನು ಶ್ಲಾಘಿಸಿದರು.
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಾಕಿ ಇರುವ ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ ಹಾಗೂ ಲೆವೆಲ್ ಕ್ರಾಸಿಂಗ್ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹಾರ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಜನಪರ ಕಾಳಜಿ ಮತ್ತು ರೈಲ್ವೆ ಅಭಿವೃದ್ಧಿಗಾಗಿ ನಡೆಸುತ್ತಿರುವ ನಿರಂತರ ಪ್ರಯತ್ನಗಳನ್ನು ಸಚಿವರು ಪ್ರಶಂಸಿಸಿದರು.
ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಸಾಧ್ಯತೆಗಳ ಆಗರವಾಗಿರುವ ಕರಾವಳಿ ಪ್ರದೇಶದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಮೂವರು ಸಂಸದರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದರು. ನ.13 ಕರಾವಳಿ ಕರ್ನಾಟಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೀಪಾವಳಿ ಉಡುಗೊರೆಯ ದಿನವಾಗಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ಬಳಿಕ ಮಂಗಳೂರು ರೈಲ್ವೆ ಪ್ರದೇಶವನ್ನು ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ದೇಶದಲ್ಲಿ ಪ್ರತಿದಿನ ಮೂರು ಕೋಟಿ ಜನರು ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ವಂದೇ ಭಾರತ್‌ನಂತಹ ಆಧುನಿಕ ರೈಲುಗಳ ಪರಿಚಯದಿಂದ ಭಾರತೀಯ ರೈಲ್ವೆಯಲ್ಲಿ ಹೊಸ ಕ್ರಾಂತಿಯೇ ನಡೆಯುತ್ತಿದೆ ಎಂದು ಹೇಳಿದರು.
ಬೆಂಗಳೂರು, ಗೋವಾ ಹಾಗೂ ಮುಂಬೈಯನ್ನು ವೇಗವಾಗಿ ತಲುಪಬೇಕು ಎಂಬ ಕರಾವಳಿ ಭಾಗದ ಜನರ ದಶಕಗಳ ಕನಸು ನನಸಾಗುವ ನಿಟ್ಟಿನಲ್ಲಿ ಮಹತ್ವದ ಯೋಜನೆಗಳು ಕಾರ್ಯಗತಗೊಳ್ಳುತ್ತಿವೆ ಎಂದರು.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಅಭಿವೃದ್ಧಿಗೆ ನೂರಕ್ಕೂ ಅಧಿಕ ಕೋಟಿ ರೂ. ಅನುದಾನ ನೀಡಲಾಗಿದ್ದು, ಪ್ಲಾಟ್‌ಫಾರ್ಮ್‌ಗಳ ವಿಸ್ತರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ಚಾಲನೆ ದೊರೆಯುತ್ತಿದೆ ಎಂದರು. ಶಾಸಕರಾದ ಡಾ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್, ಜಿಲ್ಲಾಧಿಕಾರಿ ದರ್ಶನ್ ಮತ್ತಿತರರಿದ್ದರು.
ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಂಡೇಶ್ವರ ರೈಲ್ವೆ ಕ್ರಾಸಿಂಗ್ ಸಮಸ್ಯೆಯನ್ನೂ ಕೇಂದ್ರ ಸಚಿವರ ಗಮನಕ್ಕೆ ತರಲಾಗಿತ್ತು. ಈ ಕಾಮಗಾರಿಗೆ ಸಂಬಂಧಿಸಿ ಶೀಘ್ರವೇ ದೆಹಲಿಯಿಂದ ವಿಶೇಷ ತಂಡ ಕಳುಹಿಸುವ ಭರವಸೆಯನ್ನು ರೈಲ್ವೆ ಸಚಿವರು ನೀಡಿದರು. ಜನರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸುವ ಹೃದಯವಂತಿಕೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳುತ್ತಿದ್ದಂತೆ ವೇದವ್ಯಾಸ್ ಕಾಮತ್‌ರ ಭಾಷಣದ ಮಧ್ಯೆ ವೇದಿಕೆಯಲ್ಲೇ ಶಾಸಕರ ಹೆಸರನ್ನು ಪ್ರಸ್ತಾಪಿಸಿದ ಸಚಿವ ಅಶ್ವಿನಿ ವೈಷ್ಣವ್, ಖಂಡಿತವಾಗಿಯೂ ಇದನ್ನು ಕಾರ್ಯಗತಗೊಳಿಸುತ್ತೇನೆ ಎಂದಿದ್ದು ಗಮನ ಸೆಳೆಯಿತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರೈಲ್ವೆ ಕ್ಷೇತ್ರದಲ್ಲಿ ಜನರ ನಿರೀಕ್ಷೆ ಮತ್ತು ವಿಶ್ವಾಸ ಹೆಚ್ಚಾಗಿದೆ ಎಂದು ವೇದವ್ಯಾಸ್ ಕಾಮತ್ ಹೇಳಿದರು.
ಪಾಂಡೇಶ್ವರ ರೈಲ್ವೆ ಗೇಟ್ ಬಳಿ ಓವರ್ ಬ್ರಿಡ್ಜ್ ನಿರ್ಮಿಸುವ ಅನಿವಾರ್ಯತೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿನಡೆದ ಸಭೆಯಲ್ಲೂ ಶಾಸಕ ವೇದವ್ಯಾಸ್ ಕಾಮತ್ ಸಚಿವರಿಗೆ ಮನವಿ ಸಲ್ಲಿಸಿದ್ದರು.
ಈ ಸಮಾರಂಭದಲ್ಲಿ ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದ ವಿದ್ಯುದೀಕರಣ, ಸುಬ್ರಹ್ಮಣ್ಯ ರೋಡ್ ಅಮೃತ್ ಭಾರತ್ ನಿಲ್ದಾಣದ ಲೋಕಾರ್ಪಣೆ ಹಾಗೂ ಮಂಗಳೂರು-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಾಯಿತು.