ಕೇತಿಗಾನಹಳ್ಳಿಯಲ್ಲಿ 200 ಎಕರೆ ಜಮೀನನ್ನು ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ಕಬಳಿಕೆ ಮಾಡಿದ್ದಾರೆ: ಹಿರೇಮಠ| ಈ ಕುರಿತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ನ್ಯಾಯಮೂರ್ತಿಗಳು ಸರ್ಕಾರಕ್ಕೆ ಸೂಚಿಸಿ 5 ವರ್ಷಗಳಾಗಿದೆ|
ಹಾವೇರಿ(ಜ.18): ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಿಗಾನಹಳ್ಳಿಯಲ್ಲಿ 200 ಎಕರೆ ಜಮೀನನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಸಂಬಂಧಿಕರು ಕಬಳಿಕೆ ಮಾಡಿದ್ದು, ಕೂಡಲೇ ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಆಗ್ರಹಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಂಬಂಧಿಗಳಾದ ಮಾಜಿ ಸಚಿವ ಡಿ.ಸಿ. ತಮ್ಮಣ್ಣ, ಸಾವಿತ್ರಮ್ಮ ಮತ್ತಿತರರು ಅಕ್ರಮವಾಗಿ ಸರ್ಕಾರಿ ಗೋಮಾಳ ಸೇರಿದಂತೆ 200 ಎಕರೆ ಜಮೀನು ಕಬಳಿಕೆ ಮಾಡಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ನ್ಯಾಯಮೂರ್ತಿಗಳು ಸರ್ಕಾರಕ್ಕೆ ಸೂಚಿಸಿ 5 ವರ್ಷಗಳಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹೇಮಂತ ಚಂದನಗೌಡ್ರ ಅವರಿದ್ದ ವಿಭಾಗೀಯ ಪೀಠವು ಈ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ. ಈಗಲಾದರೂ ಸರ್ಕಾರ ವಿಳಂಬ ಮಾಡದೇ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
5 ವರ್ಷಗಳಾದರೂ ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ ಇವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಮಾಜ ಪರಿವರ್ತನಾ ಸಮುದಾಯದಿಂದ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ. ಸುಮಾರು 500 ಕೋಟಿ ಬೆಲೆ ಬಾಳುವ 200 ಎಕರೆ ಜಮೀನನ್ನು ಅಕ್ರಮವಾಗಿ ಕಬಳಿಕೆ ಮಾಡಿಕೊಂಡಿರುವ ಕುಮಾರಸ್ವಾಮಿ, ಡಿ.ಸಿ. ತಮ್ಮಣ್ಣ ಅವರ ಕುಟುಂಬದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಇದಕ್ಕೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಬೇಕು ಎಂದು ಒತ್ತಾಯಿಸಿದರು.