ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನೀಡಿರುವ (ಎಸ್‌ಸಿಪಿ/ ಟಿಎಸ್‌ಪಿ) ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಬೆಂಗಳೂರು (ಜೂ.26): ಬೆಂಗಳೂರು ನಗರದ ಕಗ್ಗಲೀಪುರ ಗ್ರಾಮ ಪಂಚಾಯಿತಿ ಸೇರಿದಂತೆ 11 ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನೀಡಿರುವ ಹಣ ದುರುಪಯೋಗ ಪಡಿಸಿಕೊಂಡಿರುವುದಾಗಿ ಇಲಾಖೆಗೆ ದೂರು ಬಂದಿದ್ದು, ಇದರ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ಅವರು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿಗಳಿಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 2023-24 ನೇ ಸಾಲಿನ ಎಸ್ ಸಿ ಪಿ/ಟಿ ಎಸ್ ಪಿ ಯೋಜನಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಎಸ್ ಸಿ ಪಿ/ಟಿ ಎಸ್ ಪಿ ಯೋಜನೆಯಡಿಯಲ್ಲಿ ನೀಡಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಬಳಸಿ ಹಾಗೂ ಹೆಚ್ಚಿನ ಅನುದಾನ ಉಳಿಕೆಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ ಅನುದಾನ ಬಳಕೆಯಾಗುವಂತೆ ಕ್ರಮವಹಿಸಿ ಎಂದು ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ವಾಲ್ಮೀಕಿ ನಿಗಮದ ಹಗರಣ ಆರೋಪಿಗೆ ಜೀವ ಬೆದರಿಕೆ ಹಾಕಿದ ಮಾಜಿ ಸಚಿವ ನಾಗೇಂದ್ರನ ಆಪ್ತರು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯೋಜನೆಗಳ ಅನುಷ್ಟಾನಗಳ ಕುರಿತು ತಾಲ್ಲೂಕು ಮಟ್ಟದಲ್ಲಿ ಪ್ರತಿ ತಿಂಗಳಿಗೊಮ್ಮೆ ಸಭೆ ಕರೆಯಬೇಕು. ಸಭೆ ನಡೆಸದ ಪಕ್ಷದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ತಿಳಿಸಿದರು. ಈ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಉಪ ನಿರ್ದೇಶಕರಾದ ಜುಂಜಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.