
ಶಿಡ್ಲಘಟ್ಟ: ನಗರಸಭೆಯಿಂದ ಇ- ಖಾತೆ ವಿತರಣೆ ಮಾಡಿಕೊಡಲು ಅರ್ಜಿದಾರರೊಬ್ಬರಿಂದ ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25, 500 ಸ್ವೀಕರಿಸುತ್ತಿದ್ದ ನಗರಸಭೆಯ ದ್ವಿತೀಯ ದರ್ಜೆ ಸಹಾಯಕ (ಎಸ್ಡಿಎ) ನಾಗರಾಜ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸೋಮವಾರ ಮಧ್ಯಾಹ್ನ 3.30ರ ಸುಮಾರಿಗೆ ಶಿಡ್ಲಘಟ್ಟ ನಗರಸಭೆಯ ತಮ್ಮ ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಸರ್ಕಲ್ ಇನ್ಸ್ಪೆಕ್ಟರ್ಗಳಾದ ಶೇಖರ್ ಮತ್ತು ಶಿವರಾಜಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ದಾಳಿಯ ವೇಳೆ ಲಂಚದ ಹಣದೊಂದಿಗೆ ನಾಗರಾಜ ಅವರನ್ನು ವಶಕ್ಕೆ ಪಡೆದು ಬಂಧಿಸಿ ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಇ - ಖಾತೆ ವಿತರಣೆಯಂತಹ ಸಾರ್ವಜನಿಕ ಸೇವೆ ಪಡೆಯಲು ಲಂಚದ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ಲೋಪ, ಭ್ರಷ್ಟಾಚಾರ, ಸರ್ಕಾರಿ ಅನುದಾನದ ದುರ್ಬಳಕೆ ಹಾಗೂ ಸಾರ್ವಜನಿಕ ಸೇವೆಗಳಲ್ಲಿ ವಿಳಂಬ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ ನೀಡಿದರು.
ನಗರದ ರಾಮತೀರ್ಥ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗಳು, ತಹಶೀಲ್ದಾರ್ ಕಚೇರಿ, ಕುಮಾರಸ್ವಾಮಿ ಬಡಾವಣೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮ ಪಂಚಾಯಿತಿ ಹಾಗೂ ಶಿವಾಜಿ ನಗರದ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್ಟಿಒ) ಕಚೇರಿಗಳಿಗೆ ಶನಿವಾರ ದಿಢೀರ್ ಭೇಟಿ ನೀಡಿದ ಅವರು, ಆಡಳಿತಾತ್ಮಕ ಕಾರ್ಯವೈಖರಿ, ದಾಖಲೆಗಳು ಹಾಗೂ ಸಾರ್ವಜನಿಕರಿಗೆ ಒದಗಿಸುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು.
ರಾಮತೀರ್ಥ ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತರು ವಿದ್ಯಾರ್ಥಿಗಳ ಹಾಸಿಗೆ, ಹೊದಿಕೆ, ಕಟ್ಟಡಗಳ ನಿರ್ವಹಣೆ, ಸ್ವಚ್ಛತೆ, ಶೌಚಾಲಯ, ಅಡುಗೆ ಕೋಣೆ, ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ದಿನಸಿ ಸಾಮಗ್ರಿಗಳ ಸಂಗ್ರಹಣೆಯನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ನಿಗದಿತ ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸ್ವತಃ ಅಲ್ಪಾಹಾರ ಸೇವಿಸಿ ಗುಣಮಟ್ಟ ಪರೀಕ್ಷಿಸಿದರು.
ಅಡುಗೆ ಸಿಬ್ಬಂದಿಗೆ ಮಾಸಿಕ ವೇತನವನ್ನು ಸಕಾಲದಲ್ಲಿ ಪಾವತಿಸಬೇಕು. ಮೆರಿಟ್ ಆಧಾರದ ಮೇಲೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮೂಲಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿ ಲೋಕಾಯುಕ್ತ ದೂರು ಸಲ್ಲಿಕೆ ಮತ್ತು ಸಂಪರ್ಕದ ವಿವರಗಳ ಮಾಹಿತಿ ಫಲಕ ಅಳವಡಿಸಬೇಕು. ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ನಿರ್ಮಿಸದೆ ಸ್ನೇಹಪರ ವಾತಾವರಣ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಳಗಾವಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದ ಅವರು, ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಹಾನಿಯ ಪ್ರಮಾಣದ ಆಧಾರದ ಮೇಲೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಿರುವ ವಿವರಗಳನ್ನು ಒದಗಿಸುವಂತೆ ಸೂಚಿಸಿದರು.
ಕಂದಾಯ ಇಲಾಖೆಯ ಎಲ್ಲ ಸೇವೆಗಳನ್ನು ನಿಗದಿತ ಕಾಲಮಿತಿಯಲ್ಲಿ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸಬೇಕು. ಭ್ರಷ್ಟಾಚಾರ ನಿರ್ಮೂಲನೆಗೆ ಅಧಿಕಾರಿಗಳು ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು.