
ಸೊರಬ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ ಸುಮಾರು 400 ಕೋಟಿ ರು. ಹರಿದುಬಂದಿದ್ದು, ಇದು ಒಂದು ರೀತಿಯಲ್ಲಿ ಜನತಾ ಅಭಿವೃದ್ಧಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ 11 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳ ಮುಖಂಡರೊಂದಿಗೆ ಸಭೆ ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಫಲಾನುಭವಿಗಳ ಮನೆಗಳಿಗೆ ತಿಂಗಳಿಗೆ 5 ಸಾವಿರದವರೆಗೆ ಆರ್ಥಿಕ ಶಕ್ತಿ ತುಂಬುತ್ತಿವೆ. ಇದರಿಂದ ಜನರ ಜೀವನಮಟ್ಟ ಸುಧಾರಿಸುವುದರ ಜೊತೆಗೆ ಸ್ಥಳೀಯ ಆರ್ಥಿಕತೆಯೂ ಚೇತರಿಕೆ ಕಾಣುತ್ತಿದೆ ಎಂದು ಹೇಳಿದರು.
ಶಿಕ್ಷಣ ಇಲಾಖೆ ಬಹಳ ದೊಡ್ಡದು. ಹೀಗಾಗಿ ಈ ಹಿಂದೆ ಪ್ರತಿ ಹಳ್ಳಿಗೂ ಖುದ್ದಾಗಿ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸದಿಂದ ನಮ್ಮ ಪಕ್ಷ ನನ್ನನ್ನು ಗುರುತಿಸಿ ಮತ್ತೆ ಸಚಿವ ಸ್ಥಾನ ನೀಡಿದೆ. ನನ್ನ ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ. ಜವಾಬ್ದಾರಿ ಬಹಳಷ್ಟಿದೆ. ಹೀಗಾಗಿ ಒಂದೇ ಕಡೆ ಗ್ರಾಮ ಪಂಚಾಯಿತಿವಾರು ಹಳ್ಳಿಗಳ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದ್ದೇನೆ ಎಂದು ಹೇಳಿದರು.
ಉದ್ರಿ, ಅಂಡಿಗೆ, ಬಿಳವಾಣಿ, ಮಾವಲಿ, ಚಿಟ್ಟೂರು, ಇಂಡುವಳ್ಳಿ, ಶಿಗ್ಗಾ, ಹೆಗ್ಗೋಡು, ದೂಗೂರು, ನಿಸರಣಿ ಹಾಗೂ ಉಳವಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ-ತಮ್ಮ ಗ್ರಾಮಗಳ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.
ರಸ್ತೆ ಅಭಿವೃದ್ಧಿ, ಚರಂಡಿ ದುರಸ್ತಿ, ಕೆರೆಗಳಿಗೆ ನೀರು, ಬಸ್ ಸೌಲಭ್ಯ, ವಿದ್ಯುತ್ ಸಂಪರ್ಕ, ಇ-ಖಾತಾ ಸೇರಿದಂತೆ ವಿವಿಧ ಮೂಲಸೌಕರ್ಯಗಳ ಸಮಸ್ಯೆಗಳ ಕುರಿತು ಮನವಿಗಳನ್ನು ಸಲ್ಲಿಸಲಾಯಿತು. ಕ್ಷೇತ್ರದ ಪ್ರತಿ ಗ್ರಾಮ ಪಂಚಾಯಿತಿಗೂ ಈವರೆಗೆ ಸುಮಾರು ೧ ಕೋಟಿ ಅನುದಾನ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಅನುದಾನವನ್ನು ಇನ್ನಷ್ಟು ಹೆಚ್ಚಿಸಿ ನೀಡುತ್ತೇನೆ ಎಂದು ಭರವಸೆ ನೀಡಿದರು.
ಮುಂದಿನ ಮೂರು ತಿಂಗಳಲ್ಲಿ ಸೊರಬ ಕ್ಷೇತ್ರದ ಪ್ರತಿ ಹಳ್ಳಿಗೂ ಖುದ್ದಾಗಿ ಭೇಟಿ ನೀಡುವುದಾಗಿ ತಿಳಿಸಿದ ಅವರು, ಸಭೆಯಲ್ಲಿ ಪ್ರಸ್ತಾಪಿಸಿರುವ ಜನರ ಸಮಸ್ಯೆಗಳು ಅಷ್ಟರೊಳಗೆ ಬಗೆಹರಿದಿರಬೇಕು ಎಂದು ತಹಶೀಲ್ದಾರ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, ಇನ್ನೊಂದು ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಾಕಷ್ಟು ಬದಲಾವಣೆ ಕಾಣಲಿದೆ. ಹಳ್ಳಿಗಳ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು ಎಂದರು. ರು.
ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಹೆಚ್. ಗಣಪತಿ, ಬಗರ್‌ಹುಕುಂ ತಾಲೂಕು ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಜಯಶೀಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಸದಾನಂದಗೌಡ, ಕೆ.ಪಿ. ರುದ್ರಗೌಡ, ತಬಲಿ ಬಂಗಾರಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ತಾಲೂಕಿನ ಮಂಚಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ರಂಗಪ್ಪ ಅವರು ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದಾರೆ ಎಂಬ ದೂರು ಎಸ್‌ಡಿಎಂಸಿ ಅಧ್ಯಕ್ಷರಿಂದ ಸಚಿವರ ಗಮನಕ್ಕೆ ಬಂದಿತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಕೂಡಲೇ ಶಿಕ್ಷಕನನ್ನು ಅಮಾನತುಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ ಅವರಿಗೆ ಸೂಚಿಸಿದರು.