
ಕೋಲಾರ: ಜಿಲ್ಲೆಯ ಮಾಲೂರು ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿಗಳು ವಿನಾಕಾರಣ ಅಲೆದಾಡಿಸುತ್ತಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತ ಬಿ. ವೀರಪ್ಪ ಅವರ ಆದೇಶದ ಮೇರೆಗೆ ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಿವೇಕಾನಂದ ತುಳಸಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಐದು ಕಾರುಗಳಲ್ಲಿ ಆಗಮಿಸಿದ ಸುಮಾರು 15 ಲೋಕಾಯುಕ್ತ ಅಧಿಕಾರಿಗಳು ತಾಲೂಕು ಕಚೇರಿಯ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕಚೇರಿಗೆ ಬಂದಾಗ ಕಡತಗಳನ್ನು ವಿಲೇವಾರಿ ಮಾಡದೆ ಸತಾಯಿಸಲಾಗುತ್ತಿದೆ ಹಾಗೂ ಅನಗತ್ಯವಾಗಿ ಅಲೆದಾಡಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರ ಕಡತಗಳ ವಿಲೇವಾರಿ ಕುರಿತು ಲೋಕಾಯುಕ್ತ ತಂಡ ಮಾಹಿತಿ ಕಲೆ ಹಾಕಲು ಮುಂದಾಗಿದೆ.
ಪರಿಶೀಲನೆ ವೇಳೆ ಮಾಲೂರು ತಾಲೂಕು ತಹಶೀಲ್ದಾರ್ ರೂಪಾ ಅವರನ್ನು ಕಚೇರಿಗೆ ಬರುವಂತೆ ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಬೇಕಿದ್ದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಗೆ ಆಗಮಿಸಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಅವರ ಉಪಸ್ಥಿತಿಯಲ್ಲಿ ನಡೆಸಬೇಕಿದ್ದ ಪರಿಶೀಲನೆ ಹಾಗೂ ವಿಚಾರಣೆ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ತಹಶೀಲ್ದಾರ್ ಆಗಮಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಯನ್ನು ನಾಳೆಗೆ ಮುಂದೂಡಿದ್ದಾರೆ. ಮತ್ತೆ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆಯಿದೆ.
ಸರ್ಕಾರಿ ಕಚೇರಿಗಳಲ್ಲಿ ಜನಸಾಮಾನ್ಯರ ಕೆಲಸಗಳು ಸಕಾಲದಲ್ಲಿ ಆಗಬೇಕು ಎಂಬ ಉದ್ದೇಶದಿಂದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ಹಾಗೂ ಪರಿಶೀಲನೆ ನಡೆಸುತ್ತಿದ್ದಾರೆ. ಮಾಲೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕಡತ ವಿಲೇವಾರಿಗಾಗಿ ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ಮಹತ್ವ ಪಡೆದುಕೊಂಡಿದೆ.
ನಾಳೆ ಲೋಕಾಯುಕ್ತ ಅಧಿಕಾರಿಗಳು ಮತ್ತೊಮ್ಮೆ ಪರಿಶೀಲನೆ ಮುಂದುವರಿಸಲಿದೆ. ತಾಲೂಕು ಕಚೇರಿಯ ಕಾರ್ಯವೈಖರಿ ಹಾಗೂ ಕಡತ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಲೋಕಾಯುಕ್ತರ ಈ ದಿಢೀರ್ ಕಾರ್ಯಾಚರಣೆ ತಾಲೂಕು ಕಚೇರಿಯ ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇನ್ನು ಕೆಲವು ಅಧಿಕಾರಿಗಳ ಮೇಳೆ ಈ ಮೊದಲಿನಿಂದಲೂ ಆರೋಪಗಳು ಇದ್ದವು. ಯಾವುದೇ ಕೆಲಸವನ್ನೂ ಸಮಯಕ್ಕೆ ಸರಿಯಾಗಿ ಮಾಡುತ್ತಿರಲಿಲ್ಲ. ಈಗ ಲೋಕಾಯುಕ್ತ ದಾಳಿ ಆಗಿದೆ. ಏನು ಮಾಡುತ್ತಾರೆ ನಮ್ಮ ಅಧಿಕಾರಿಗಳು ಎಂಬ ಚರ್ಚೆ ಶುರುವಾಗಿದೆ.