
ನವದೆಹಲಿ (ನ.25): ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊ** ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಭಾರಿ ಆಘಾತ ನೀಡಿದೆ: ಕಳೆದ ಜೂನ್‌ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಜೀವಾವಧಿ ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸಿರುವ ಸರ್ವೋಚ್ಚ ನ್ಯಾಯಾಲಯ, ಮುಂದಿನ ಎರಡು ವಾರಗಳ ಒಳಗಾಗಿ ಜೈಲಿಗೆ ಶರಣಾಗುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಅದರೊಂದಿಗೆ ಜಾಮೀನಿಗೆ ನೀಡಲಾಗಿದ್ದ ಎರಡು ಬೇಲ್ ಬಾಂಡ್‌ಅನ್ನೂ ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಯೋಗೇಶ್ ಗೌಡ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಭವಿಷ್ಯ ಏನಾಗಲಿದೆ ಎಂಬ ತೀವ್ರ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠವು ಇಂದು ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಈ ಮಹತ್ವದ ತೀರ್ಪನ್ನು ಪ್ರಕಟಿಸಿತು.
ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ (CBI) ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ ಗೌಡ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಎರಡೂ ಅರ್ಜಿಗಳ ಸುದೀರ್ಘ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಪೀಠವು ಕಳೆದ ಅಕ್ಟೋಬರ್ ತಿಂಗಳಿನಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಬುಧವಾರ ತೀರ್ಪು ಪ್ರಕಟಿಸಿದ ನ್ಯಾಯಪೀಠ, ಸಿಬಿಐ ಮತ್ತು ಗುರುನಾಥ ಗೌಡ ಅವರ ಮೇಲ್ಮನವಿಯನ್ನು ಅಂಗೀಕರಿಸಿದೆ.
ಹೈಕೋರ್ಟ್ ನೀಡಿದ್ದ ಜಾಮೀನು ಆದೇಶ ಮತ್ತು ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದ್ದ ಆದೇಶವೆರಡನ್ನೂ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ವಿನಯ್ ಕುಲಕರ್ಣಿ ಅವರು ಮುಂದಿನ 2 ವಾರಗಳ ಒಳಗಾಗಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು ಹಾಗೂ ಅಲ್ಲಿದ ಜೈಲಿಗೆ ತೆರಳಬೇಕು ಎಂದು ಆದೇಶಿಸಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರ ಕೊ** ಪ್ರಕರಣದಲ್ಲಿ ವಿನಯ್ ಕುಲಕರ್ಣಿ ದೋಷ ಸಾಬೀತಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್‌ನಲ್ಲಿ ವಿನಯ್ ಕುಲಕರ್ಣಿ ಅವರನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ಬೆನ್ನಲ್ಲೇ ಅವರು ಜೈಲು ಪಾಲಾಗಿದ್ದರು. ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕಳೆದ ಜೂನ್ ತಿಂಗಳಿನಲ್ಲಿ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿತ್ತು. ಇದರಿಂದಾಗಿ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರಿಂದ ಈಗ ಅವರಿಗೆ ಮತ್ತೆ ಜೈಲು ಶಿಕ್ಷೆ ಎದುರಾಗಿದೆ.