
ನವದೆಹಲಿ: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 5 ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗಾಗಿ ಅಪರಾಧ ತನಿಖಾ ವಿಭಾಗದ (ಸಿಐಡಿ) ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದೆ. ಇದರ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಅವರಿಗೆ ನ್ಯಾಯಾಂಗದಿಂದ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಫೆಬ್ರವರಿ 10ರಂದು ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ, ಫೆಬ್ರವರಿ 11ರಂದು ಬೈರತಿ ಬಸವರಾಜ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಕೂಡ ಯಾವುದೇ ರಿಲೀಫ್ ನೀಡಲು ನಿರಾಕರಿಸಿದೆ. ಬದಲಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತವಾದ ನಂತರ, ಶಾಸಕ ಬೈರತಿ ಬಸವರಾಜ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಮುಖ್ಯ ನ್ಯಾಯಮೂರ್ತಿ ಪರ್ಡಿವಾಲ ಮತ್ತು ನ್ಯಾಯಮೂರ್ತಿ ಮಹದೇವನ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತು.
ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಬೈರತಿ ಬಸವರಾಜ್ ಅವರಿಗೆ ಯಾವುದೇ ಮಧ್ಯಂತರ ರಿಲೀಫ್ ನೀಡಲು ಸ್ಪಷ್ಟವಾಗಿ ನಿರಾಕರಿಸಿತು. ಜೊತೆಗೆ, ಸಿಐಡಿ ನಡೆಸುತ್ತಿರುವ ತನಿಖೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿತು. ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂಬ ಸಂದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ.
ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಸಿಗುವ ಯಾವುದೇ ಸೂಚನೆ ದೊರೆಯದ ಹಿನ್ನೆಲೆಯಲ್ಲಿ, ಬೈರತಿ ಬಸವರಾಜ್ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆದರು. ಈ ವೇಳೆ, ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಕೂಡ ಕೋರಲಾಗಿತ್ತು. ಆದರೆ ಸುಪ್ರೀಂ ಕೋರ್ಟ್ ಅದಕ್ಕೂ ಅವಕಾಶ ನೀಡಲಿಲ್ಲ.
ಸುಪ್ರೀಂ ಕೋರ್ಟ್, ಬೈರತಿ ಬಸವರಾಜ್ ಅವರು ಸಿಐಡಿ ಮುಂದೆ ಸರೆಂಡರ್ ಆಗಿ ತನಿಖೆಗೆ ಹಾಜರಾಗಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದೆ. ಸಿಐಡಿ ವಿಚಾರಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ, ಬೈರತಿ ಬಸವರಾಜ್ ಅವರು ಇಂದು ಮಧ್ಯಾಹ್ನದ ವೇಳೆಗೆ ಸಿಐಡಿ ಮುಂದೆ ಸರೆಂಡರ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಮತ್ತಷ್ಟು ವೇಗ ಪಡೆಯುವ ಸಾಧ್ಯತೆ ಇದೆ.
2025 ರ ಜುಲೈ 15 ರ ರಾತ್ರಿ ಹಲಸೂರು ಕೆರೆ ಸಮೀಪದ ಮನೆಯ ಬಳಿ ರೌಡಿಶೀಟರ್ ಬಿಕ್ಲು ಶಿವನನ್ನು ದುಷ್ಕರ್ಮಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿತ್ತು. ಶಿವನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಸವರಾಜ್ ಅವರು ಐದನೇ ಆರೋಪಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು, ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ (ಕೋಕಾ) ಕಾಯ್ದೆಯಡಿ ಕ್ರಮ ಜರುಗಿಸಿದ್ದಾರೆ.