Karnataka Politics: 42 ಶಾಸಕರಿಗೆ ಸಂಪುಟ ದರ್ಜೆ, ಕ್ಯಾಬಿನೆಟ್ ಸ್ಥಾನ ಪ್ರಶ್ನಿಸಿದ್ದ ಅರ್ಜಿ ವಜಾ

Published : May 27, 2026, 01:17 PM IST
supreme court

ಸಾರಾಂಶ

ನಿಗಮ-ಮಂಡಳಿಗಳ ಅಧ್ಯಕ್ಷರಾಗಿ ನೇಮಕಗೊಂಡ 42 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಕೂಡ ಇದೇ ರೀತಿಯ ಅರ್ಜಿಯನ್ನು ವಜಾಗೊಳಿಸಿತ್ತು.

ನವದೆಹಲಿ: ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಅಲಂಕರಿಸಿರುವ 42 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕರ್ನಾಟಕ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನೇಮಕ

2025ರ ಜನವರಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 42 ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ನಿಗಮ-ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಿಸಿ, ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿದಾರರ ಆಕ್ಷೇಪವೇನು?

ವಿಧಾನಸಭೆಯ ಸದಸ್ಯರು (ಶಾಸಕರು) ಮತ್ತು ವಿಧಾನ ಪರಿಷತ್ತಿನ (ಎಂಎಲ್‌ಸಿ) ಸದಸ್ಯರನ್ನು ವಿವಿಧ ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರನ್ನಾಗಿ ನೇಮಿಸುವುದು ತಪ್ಪಲ್ಲ. ಆದರೆ, ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದು ಸಂವಿಧಾನದ 161 (1ಎ) ತಿದ್ದುಪಡಿಯ ಉಲ್ಲಂಘನೆಯಾಗಲಿದೆ. ಮುಖ್ಯಮಂತ್ರಿ ಸೇರಿ ಒಟ್ಟು ಸಚಿವರ ಸಂಖ್ಯೆ, ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆಯ ಶೇಕಡಾ 15ಕ್ಕಿಂತ (15%) ಹೆಚ್ಚಿರಬಾರದು ಎಂಬ ನಿಯಮದ ಉಲ್ಲಂಘನೆಯಾಗಲಿದೆ. ಜೊತೆಗೆ, ಈ ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವುದರಿಂದ ಹೆಚ್ಚಿನ ಸಂಬಳ, ಅಧಿಕೃತ ವಾಹನಗಳು, ಚಾಲಕರು, ಇಂಧನ ಭತ್ಯೆ, ಮನೆ ಬಾಡಿಗೆ ಭತ್ಯೆ ಮತ್ತು ವೈದ್ಯಕೀಯ ಮರುಪಾವತಿಗಳಂತಹ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.

ಮಾರ್ಚ್‌ 4ರಂದು ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಮಂಗಳವಾರ ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ದ್ವಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿತು. ಈ ಸಂಬಂಧ ಹೈಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಿತು

PREV
Read more Articles on
click me!

Recommended Stories

Siddaramaiah: ಸಿಎಂ ಆಗಿ ಇಂದಿನ ಕಾರ್ಯಕ್ರಮಗಳೇ ಕೊನೆ? ಸಿದ್ದರಾಮಯ್ಯ ಹೇಳಿದ ಆ ಮಾತಿನಿಂದ ಮತ್ತಷ್ಟು ಸಸ್ಪೆನ್ಸ್! (Video)
ವಿದ್ಯುತ್‌ ಖಾಸಗೀಕರಣದ ವಿರುದ್ಧ ಹೊತ್ತಿಕೊಂಡ ಹೋರಾಟದ ಕಿಡಿ, ಆಕ್ಷೇಪಣೆ ಅಭಿಯಾನಕ್ಕೆ ಕರೆ