
ಉಡುಪಿ (ಜೂ.10): ತಮಿಳುನಾಡು ನೂತನ ಮುಖ್ಯಮಂತ್ರಿ ಹಾಗೂ ಖ್ಯಾತ ನಟರಾದ ಜೋಸೆಫ್ ವಿಜಯ್(Tamil nadu Chief Minister Joseph Vijay) ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ(Kolluru mookambika temple)ಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಅವರು ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸುತ್ತಿರುವುದು ವಿಶೇಷವಾಗಿದೆ.
ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊಲ್ಲೂರಿಗೆ ಆಗಮಿಸಲಿರುವ ಸಿಎಂ ವಿಜಯ್, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮೂಕಾಂಬಿಕಾ ದೇವಿ ದರ್ಶನ, ಪೂಜಾ ಕಾರ್ಯಕ್ರಮ ಮುಗಿದ ಬಳಿಕ ಸಿಎಂ ವಿಜಯ್ ಮಂಗಳೂರಿಗೆ ತೆರಳಿ ಅಲ್ಲಿನ ವಿಮಾನ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ. ಅವರ ಭೇಟಿಗೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ.
ಕೊಲ್ಲೂರು ಮೂಕಾಂಬಿಕಾ ದೇವಾಲಯವು ದೇಶದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾಗಿದ್ದು, ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಸೇರಿದಂತೆ ಅನೇಕ ಗಣ್ಯರು ಆಗಾಗ್ಗೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯುತ್ತಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಹಾಗೂ ಸಿನಿಮಾ ತಾರೆಯರು ಸಹ ಈ ಕ್ಷೇತ್ರಕ್ಕೆ ಭೇಟಿ ನೀಡಿರುವ ಇತಿಹಾಸವಿದೆ. ನೀವು ಕ್ಷೇತ್ರಕ್ಕೆ ಒಮ್ಮೆಯೂ ಭೇಟಿ ನೀಡಿರದಿದ್ದರೆ ಇದು ಸರಿಯಾದ ಸಮಯ, ಭೇಟಿ ನೀಡಿ ದೇವಿಯ ದರ್ಶನ ಪಡೆಯಿರಿ.