ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಎಬಿವಿಪಿ ಪದಾಧಿಕಾರಿಗಳು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ತುಮಕೂರು : ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಎಬಿವಿಪಿ ಪದಾಧಿಕಾರಿಗಳು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದಕಾರ್ಯಕರ್ತರು ಮೆರವಣಿಗೆ ಮೂಲಕ ಆಗಮಿಸಿ ಸರ್ಕಾರಕ್ಕೆ ಮನವಿ ನೀಡಿದರು. ಜೂನ್ ತಿಂಗಳಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಜರಾಗಬೇಕಾಗುತ್ತಿದೆ. ವಿದ್ಯಾರ್ಥಿಗಳು ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.
ಕರ್ನಾಟಕದಲ್ಲಿ ನೂತನ ಸರ್ಕಾರವು ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಘೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಾಗಿ ಶಾಲಾ- ಕಾಲೇಜುಗಳಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕಷ್ಟದ ಪರಿಸ್ಥಿತಿಯನ್ನುಂಟು ಮಾಡಿದೆ ಎಂದಿದ್ದಾರೆ.
ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಮರ್ಪಕವಾಗಿ ಎಷ್ಟುಸಂಖ್ಯೆಯಲ್ಲಿ ಬಸ್ಸಿನ ಸಂಖ್ಯೆ ಬೇಕೋ ಅಷ್ಟುಸಂಖ್ಯೆಯಲ್ಲಿ ಬಸ್ಸುಗಳು ಸಂಚರಿಸುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಸ್ಸಿನ ಸಮಸ್ಯೆಯಿಂದಾಗಿ ಕೆಲವು ದಿನಗಳ ಹಿಂದೆ ಹಾವೇರಿಯಲ್ಲಿ ವಿದ್ಯಾರ್ಥಿನಿಗೆ ಬಸ್ಸನ್ನು ಹತ್ತಲು ಹೋದಾಗ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದರು.
ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಕೊಡಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಟ್ಟಿರುವ ಹಾಗೆ ಮುಂದಿನ ಯೋಜನೆಗಳಲ್ಲಿ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.
ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್, ಮಹಾನಗರ ಕಾರ್ಯದರ್ಶಿ ಹರ್ಷವರ್ಧನ, ಸಹ ಕಾರ್ಯದರ್ಶಿ ಪ್ರಜ್ವಲ್, ಕಾರ್ಯಕರ್ತರಾದ ವಿನೋದ್, ವಿಶ್ವನಾಥ, ಹೇಮಂತ್, ವಿರೇಶ, ಅಜಯ್, ಕೀರ್ತನಾ, ಯಶಸ್ವಿನಿ, ವಿದ್ಯಾ, ಲಕ್ಷ್ಮಿ, ತನು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.