ಬಿಜೆಪಿ ಅಧ್ಯಕ್ಷ ನೇತೃತ್ವದಲ್ಲಿ ಬೃಹತ್ ಜನಜಾಗೃತಿ ಸಮಾವೇಶ| 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿ|5000 ಪೊಲೀಸರ ಭದ್ರತೆ| ನಗರದ ಪ್ರಮುಖ ವೃತ್ತಗಳಲ್ಲಿ, ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ|
ಹುಬ್ಬಳ್ಳಿ(ಜ.18): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ಪಕ್ಷಗಳ ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಷ್ಟ್ರಾದ್ಯಂತ ಜಾಗೃತಿ ಅಭಿಯಾನ ಪ್ರಾರಂಭಿಸಿರುವ ಆಡಳಿತ ಪಕ್ಷ ಬಿಜೆಪಿಯ ರಾಜ್ಯದ ಮೊದಲ ಬೃಹತ್ ಸಮಾವೇಶ ಹುಬ್ಬಳ್ಳಿಯಲ್ಲಿ ಶನಿವಾರ ನಡೆಯಲಿದೆ.
ನಗರದ ನೆಹರು ಮೈದಾನದಲ್ಲಿ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ. ಈ ವೇಳೆ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದ್ದು ಮುಂಜಾಗ್ರತಾ ಕ್ರಮವಾಗಿ ನಗರದೆಲ್ಲೆಡೆ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಏತನ್ಮಧ್ಯೆ ಶಾ ಆಗಮನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಮಧ್ಯಾಹ್ನ 3 ಗಂಟೆಗೆ ‘ಗೋ ಬ್ಯಾಕ್ ಅಮಿತ್ ಶಾ’ ಘೋಷವಾಕ್ಯದೊಂದಿಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಈಗಾಗಲೇ ಸರ್ವಪಕ್ಷಗಳ ಹಾಗೂ ಸಂಘಸಂಸ್ಥೆಗಳ ಮುಖಂಡರ ಸಭೆ ನಡೆಸಿ ಯಾವುದೇ ಪ್ರತಿಭಟನೆ ನಡೆಸದಂತೆ ಪೊಲೀಸ್ ಆಯುಕ್ತ ಆರ್.ದಿಲೀಪ್ ಮನವಿ ಮಾಡಿಕೊಂಡಿದ್ದರೂ ಕಾಂಗ್ರೆಸ್ ಪಕ್ಷದ ಮುಖಂಡರು, ಪ್ರತಿಭಟನೆ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ.
ಬೃಹತ್ ವೇದಿಕೆ:
ಅಮಿತ್ ಶಾ ಸ್ವಾಗತಕ್ಕೆ ನಗರವಿಡೀ ಕೇಸರಿ ಮಯವಾಗಿದ್ದು, ಎಲ್ಲೆಡೆ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಸಂಜೆ 4.30ರಿಂದ 6.30ರ ವರೆಗೆ ನಡೆಯಲಿರುವ ಸಮಾವೇಶಕ್ಕೆ 30/60 ಚದುರಡಿ ಸುತ್ತಳತೆಯ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವೇದಿಕೆಯಲ್ಲಿ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಸುರೇಶ ಅಂಗಡಿ, ಪ್ರಹ್ಲಾದ ಜೋಶಿ, ಸದಾನಂದ ಗೌಡ, ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಚಿವರಾದ ಜಗದೀಶ ಶೆಟ್ಟರ್, ಆರ್. ಅಶೋಕ ಸೇರಿದಂತೆ 30ಕ್ಕೂ ಹೆಚ್ಚು ಮುಖಂಡರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಮುಖ್ಯ ವೇದಿಕೆ ಪಕ್ಕದ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಸಮಾವೇಶಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲೆ, ಗ್ರಾಮಾಂತರ ಜಿಲ್ಲೆ ಹಾಗೂ ಗದಗ, ಹಾವೇರಿ ಜಿಲ್ಲೆಗಳಿಂದಲೂ ಜನರು ಆಗಮಿಸುತ್ತಿದ್ದು 25 ಸಾವಿರಕ್ಕೂ ಹೆಚ್ಚು ಆಸನಗಳನ್ನು ವೇದಿಕೆ ಮುಂಭಾಗದಲ್ಲಿ ಹಾಕಲಾಗಿದೆ. ಜನರಿಗೆ ವೇದಿಕೆ ಕಾರ್ಯಕ್ರಮ ವೀಕ್ಷಣೆಗೆ ಅನುಕೂಲವಾಗಲೆಂದು ಬೃಹತ್ ಮೈದಾನದ ಒಳಗೆ 4 ಹಾಗೂ ಮೈದಾನದ ಹೊರಗೆ 2 ಎಲ್‌ಸಿಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಬೇರೆ ಊರುಗಳಿಂದ ಬರುವ ವಾಹನಗಳ ನಿಲುಗಡೆಗೆ ಆರು ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಕುಡಿಯುವ ನೀರು, ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಮೈದಾನದಲ್ಲೂ ಕುಡಿಯುವ ಪೂರೈಕೆ ವ್ಯವಸ್ಥೆ ಇರುವುದಾಗಿ ಸಂಘಟಕರು ತಿಳಿಸಿದ್ದಾರೆ.
ಬಿಗಿ ಭದ್ರತೆ:
ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ತೊಡಗಿದ್ದಾರೆ. ಹುಬ್ಬಳ್ಳಿ, ಧಾರವಾಡ, ಮಹಾನಗರ ಜಿಲ್ಲೆಯಲ್ಲದೇ ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಶುಕ್ರವಾರದಿಂದಲೇ ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಈಗಾಗಲೇ ಎನ್‌ಎಸ್‌ಜಿ 2 ತಂಡಗಳು ನಗರಕ್ಕೆ ಆಗಮಿಸಿದ್ದು, ಸಮಾವೇಶದ ಸ್ಥಳ ಹಾಗೂ ಸುತ್ತಮುತ್ತಲಿನ ಕಟ್ಟಡಗಳನ್ನು ಪರಿಶೀಲಿಸಿದೆ.
ಮೈದಾನದ ಸುತ್ತಮುತ್ತಲಿರುವ ಅಂಗಡಿ ಮುಗ್ಗಟ್ಟುಗಳನ್ನು ಮಧ್ಯಾಹ್ನದ ಹೊತ್ತಿಗೆ ಬಂದ್ ಮಾಡಲು ಪೊಲೀಸರು ಸೂಚನೆ ನೀಡಿದ್ದಾರೆನ್ನಲಾಗಿದೆ. ಮೈದಾನದ ಹಿಂದಿರುವ ಸ್ಯಾಟಲೈಟ್ ಬಿಲ್ಡಿಂಗ್‌ನಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ನಗರದ ಪ್ರಮುಖ ವೃತ್ತಗಳಲ್ಲಿ, ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಶಾಗೆ ಡೆನಿಸನ್ಸ್‌ನಲ್ಲಿ ವ್ಯವಸ್ಥೆ
ಮಧ್ಯಾಹ್ನ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಡೆನಿಸನ್ಸ್ ಹೋಟೆಲ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಮಯವಿದ್ದರೆ, ವಿಮಾನ ನಿಲ್ದಾಣದಿಂದ ಹೋಟೆಲ್‌ಗೆ ತೆರಳಲಿದ್ದಾರೆ. ಇಲ್ಲದಿದ್ದರೆ ನೇರವಾಗಿ ಸಮಾವೇಶ ಸ್ಥಳಕ್ಕೆ ಆಗಮಿಸಲಿದ್ದಾರೆ. ಸಮಾವೇಶ ಮುಗಿದ ಬಳಿಕ ರಾತ್ರಿ ಹುಬ್ಬಳ್ಳಿಯಲ್ಲೇ ವಾಸ್ತವ್ಯ ಮಾಡುವ ಸಾಧ್ಯತೆಯೂ ಇದೆ. ಇದು ಕಾರ್ಯಕ್ರಮ ಎಷ್ಟೊತ್ತಿಗೆ ಮುಕ್ತಾಯವಾಗುತ್ತದೆ ಎಂಬುದರ ಮೇಲೆ ವಾಸ್ತವ್ಯ ನಿರ್ಧಾರವಾಗಲಿದೆ. ಒಂದು ವೇಳೆ ಹುಬ್ಬಳ್ಳಿಯಲ್ಲೇ ಉಳಿದುಕೊಂಡರೆ, ನಗರದ ಗಣ್ಯರ ಜತೆ ಸಂವಾದ ನಡೆಸುವ ಸಾಧ್ಯತೆಯೂ ಇದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.