ಮೋದಿ ಕೈ ಬಲಪಡಿಸಲು ವಿಜಯೇಂದ್ರ ರಾಜ್ಯ ಪ್ರವಾಸ

Published : Nov 20, 2023, 08:40 AM IST
 ಮೋದಿ ಕೈ ಬಲಪಡಿಸಲು ವಿಜಯೇಂದ್ರ ರಾಜ್ಯ ಪ್ರವಾಸ

ಸಾರಾಂಶ

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಆಸ್ತಿ. ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವುದಾಗಿ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

  ನಾಗಮಂಗಲ :  ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಆಸ್ತಿ. ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವುದಾಗಿ ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಕೆ.ಆರ್.ಪೇಟೆಗೆ ಹೋಗುವ ವೇಳೆ ಪಟ್ಟಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಪಕ್ಷ ಸಂಘಟನೆ ಕುರಿತಂತೆ ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಎಲ್ಲ ಮಠಮಾನ್ಯಗಳೂ ಸೇರಿದಂತೆ ಬೂತ್‌ ಮಟ್ಟದ ಅಧ್ಯಕ್ಷರ ಮನೆ ಭೇಟಿ ಮಾಡಿ ಕಾರ್ಯಕರ್ತರ ಸಭೆ ನಡೆಸಲಾಗುವುದು ಎಂದರು.

ಬಿಜೆಪಿ ನಾಯಕ ಯತ್ನಾಳ್ ಮುನಿಸು ತಣಿಸುವ ಜೊತೆಗೆ ಪಕ್ಷದಲ್ಲಿ ಆಗಿರುವ ಗೊಂದಲಗಳು ಸರಿ ಹೋಗಲಿದೆ. ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ನೀಡಲಿದ್ದೇವೆ ಎಂದರು.

ಬಿವೈವಿಗೆ ಅದ್ಧೂರಿ ಸ್ವಾಗತ:

ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ಕೊಟ್ಟ ಬಿ.ವೈ.ವಿಜಯೇಂದ್ರ ಅವರಿಗೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಪುತ್ರ ಎಲ್.ಎಸ್.ಚೇತನ್‌ಗೌಡ ನೇತೃತ್ವದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಟಿ.ಮರಿಯಪ್ಪ ವೃತ್ತದಲ್ಲಿ ಅದ್ಧೂರಿ ಸ್ವಾಗತ ಕೋರಿದರು.

ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಬೃಹತ್ ಪಟಾಕಿ ಸಿಡಿಸಿದ ಕಾರ್ಯಕರ್ತರು ಜಯಘೋಷ ಮೊಳಗಿಸಿ ಸಂಭ್ರಮಿಸಿದರು. ಬಿಜೆಪಿ ಮಹಿಳಾ ಕಾರ್ಯಕರ್ತೆ ಬೆಲ್ಲದ ಆರತಿ ಮಾಡಿ ಬರಮಾಡಿಕೊಂಡರೆ, ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಶಾಲು, ಏಲಕ್ಕಿ ಹಾರ ಹಾಕಿ ಗೌರವ ಸಲ್ಲಿಸಿದರು. ತಾಲೂಕಿನ ಬಿಜೆಪಿ ಕಾರ್ಯಕರ್ತರ ಅಭಿಮಾನಕ್ಕೆ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧನ್ಯವಾದ ತಿಳಿಸಿ ಕೆ.ಆರ್.ಪೇಟೆಯತ್ತ ಪ್ರವಾಸ ಮುಂದುವರಿಸಿದರು.

ಈ ವೇಳೆ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ, ತಾಪಂ ಮಾಜಿ ಸದಸ್ಯ ಹೇಮರಾಜು, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ತೆಂಗಿನಭಾಗ ನಾಗರಾಜು, ಮುಖಂಡರಾದ ಸೋಮಶೇಖರ್, ನರಸಿಂಹಮೂರ್ತಿ, ತೊಳಲಿಕೃಷ್ಣಮೂರ್ತಿ ಸೇರಿದಂತೆ ನೂರಾರು ಮಂದಿ ಕಾರ್ಯರ್ತರಿದ್ದರು.

PREV
Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!