
ಗದಗ: ಗ್ರಾಮೀಣ ಭಾಗದ ಜನಸಾಮಾನ್ಯರಿಗೆ ಉಚಿತ ಕಾನೂನು ನೆರವು, ಸಲಹೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಮುಂಡರಗಿ ತಾಲೂಕಿನ ಕದಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಕಾನೂನು ಸೇವಾ ಕ್ಲಿನಿಕ್ (Village Legal Services Clinic) ಉದ್ಘಾಟಿಸಲಾಯಿತು.
ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಎಸ್. ಶಿವನಗೌಡ್ರ, ಕದಾಂಪುರ ಗ್ರಾಮವನ್ನು 60 ದಿನಗಳ ಮೆಗಾ ಡ್ರೈವ್ ಅಭಿಯಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಗ್ರಾಮದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು, ಅರ್ಹರಿಗೆ ಉಚಿತ ಕಾನೂನು ನೆರವು ಒದಗಿಸುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ತಲುಪಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ದೊರಕಿಸಲು ಮಾರ್ಗದರ್ಶನ ನೀಡಲಾಗುತ್ತದೆ. ಕಾಲಕಾಲಕ್ಕೆ ಕಾನೂನು ಅರಿವು ಕಾರ್ಯಕ್ರಮ ಹಾಗೂ ನೆರವು ಶಿಬಿರಗಳನ್ನು ಆಯೋಜಿಸಲಾಗುತ್ತದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡರಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕದಾಂಪುರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ವಿಜಯಕುಮಾರ ಬೆನ್ನಿ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಗೌರಿ, ಎ.ಎಲ್. ಬಂಕಾಪುರ ಹಾಗೂ ವಿ.ಜಿ. ಮುದಿಯಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಅಧಿಕಾರಿಗಳು, PLVಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾಮೀಣ ಭಾಗದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ನ್ಯಾಯ ದೊರಕಬೇಕು, ಕಾನೂನು ಅರಿವು ಪ್ರತಿಯೊಂದು ಮನೆಗೂ ತಲುಪಬೇಕು ಎಂಬ ಆಶಯದೊಂದಿಗೆ ಈ 60 ದಿನಗಳ ಮೆಗಾ ಡ್ರೈವ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.